ಕಾರವಾರ: ನಾನು ಮುಖ್ಯಮಂತ್ರಿ ಆಗಿದ್ದರೆ ರಾಜ್ಯ ಸರ್ಕಾರದ ಐದು ಖಾತರಿಗಳನ್ನು ಜಾರಿಗೆ ತರುತ್ತಿರಲಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್‌ವಿ ದೇಶಪಾಂಡೆ ಭಾನುವಾರ ಹೇಳಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸರ್ಕಾರಿ ಬಸ್‌ಗಳು ಈಗ ಮಹಿಳೆಯರಿಗೆ ಮಾತ್ರ ಸೀಮಿತವಾಗಿದ್ದು, ಪುರುಷರಿಗೆ ಜಾಗವಿಲ್ಲದಂತಾಗಿದೆ ಎಂದಿದ್ದಾರೆ.
‘ಸಿದ್ದರಾಮಯ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿತು. ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದ್ದು, ಇದು ಅವರಿಗೆ ಲಾಟರಿ ಹೊಡೆದಂತಾಗಿದೆ. ಪುರುಷರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಪುರುಷರು ಹೆಚ್ಚು ಮಾತನಾಡಿದರೆ, ಅವರಿಗೆ ಶಿಕ್ಷೆಯಾಗುತ್ತದೆ. ಸಿದ್ದರಾಮಯ್ಯನವರಿಗೆ ಯಾರು ಸಲಹೆ ನೀಡಿದ್ದಾರೋ ದೇವರೇ ಬಲ್ಲ. ನಾನು ಮುಖ್ಯಮಂತ್ರಿಯಾಗಿದ್ದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿರಲಿಲ್ಲ’ ಎಂದು ಹೇಳಿದರು.