ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ.
ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ
ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಅದಾದ ನಂತರ ಅಂಥವರಿಗೆ ನೊಟೀಸ್ ನೀಡಿ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಇಂದಿನ ಸಭೆಯಲ್ಲಿ ಮಾಹಿತಿ ನೀಡಿದರು. ಹಾಗೇ, ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್ ಬಂಕ್‍ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್ ಬಂಕ್‍ಗಳ ತಪಾಸಣೆ ಮಾಡಲಾಗಿದೆ ಎಂದು ಮುನಿಯಪ್ಪ ತಿಳಿಸಿದರು.