ಧಾರವಾಡ : ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ನಗರದ ಆರ್ಟ ಗ್ಯಾಲರಿಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ಅವರು ಮಾತನಾಡಿ, ಕಾಲೇಜು ಮಟ್ಟದ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಪರಿಚಯಿಸುವ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗುತ್ತಿದೆ ಎಂದರು.
ಮತದಾನವು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಮತದಾನದ ಮಹತ್ವವನ್ನು ಸಾರುವ ಕಾರ್ಯಕ್ರಮಗಳನ್ನು ವಿವಿಧ ವಲಯಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪ್ರಜಾಪ್ರಭುತ್ವದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಸವರಾಜ ಕುರಿಯವರ ಅವರು ಅಧ್ಯಕ್ಷತೆ ವಹಿಸಿದ್ದರು. ಚಿತ್ರ ಕಲಾ ಸ್ಪರ್ಧೆಯ ಸಂಯೋಜಕಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀಯದರ್ಶಿನಿ ಹಿರೇಮಠ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಇಂದಿನ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ಸುಮಾರು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಮತದಾನದ ಪ್ರಾಮುಖ್ಯತೆಯ ಬಗ್ಗೆ ವಿವಿಧ ರೀತಿಯ ಚಿತ್ರಗಳನ್ನು ಬಿಡಿಸಿದರು. ನಿರ್ಣಾಯಕರಾಗಿ ಹಿರಿಯ ಚಿತ್ರಕಲಾತಜ್ಞರಾದ ಡಾ. ಬಿ.ಮಾರುತಿ, ಪ್ರೊ. ಎಸ್.ಕೆ.ಪತ್ತಾರ ಹಾಗೂ ಎಫ್.ವ್ಹಿ.ಚಿಕ್ಕಮಠ ಅವರು ಭಾಗವಹಿಸಿದ್ದರು.