ಬೆಳಗಾವಿ, ಡಿ.10: ನೂರಾರು ವರ್ಷಗಳಿಂದ ಶಿಕ್ಷಣ ವಂಚಿತವಾಗಿದ್ದ ಹೈದ್ರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದ ಅನುದಾನ ರಹಿತ ಕನ್ನಡ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಕುರಿತಂತೆ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿ ಅವರು ಮಾತನಾಡಿದರು.
1995ರಿಂದ 2005ರವರೆಗಿನ ಕನ್ನಡ ಶಾಲೆಗಳು ಮತ್ತು ಕಾಲೇಜುಗಳಿಗೂ ವೇತನಾನುದಾನ ನೀಡುವ ಅಗತ್ಯವಿದೆ. ನ್ಯಾಯಯುತವಾದ ನಿಮ್ಮ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಆರ್ಥಿಕ ಇಲಾಖೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು ಎಂದರು.
ಸಾಮಾನ್ಯವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಮನೋಭಾವ ಹೊಂದಿರುತ್ತವೆ ಆದರೆ ಉ.ಕ., ಹೈಕದ ಖಾಸಗಿ ಶಾಲೆಗಳು ಸೇವಾ ಮನೋಭಾವದಿಂದ ಕೆಲಸ ಮಾಡಿವೆ. ಇಲ್ಲಿ ಓದಿದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ. ಮಾನವ ಅಭಿವೃದ್ಧಿ ಸೂಚ್ಯಂಕಕ್ಕೂ ಈ ಶಾಲೆಗಳ ಕೊಡುಗೆ ಅಪಾರ ಎಂದು ಈಶ್ವರ ಖಂಡ್ರೆ ಹೇಳಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉ.ಕ, ಹೈ.ಕದ ಕನ್ನಡ ಶಾಲೆಗಳ ವೇತನಾನುದಾನಕ್ಕೆ ಪ್ರಯತ್ನ: ಈಶ್ವರ ಖಂಡ್ರೆ


