ನವದೆಹಲಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್ 13 ರಂದು ನಡೆಯಲಿದ್ದು, ಮಂಗಳವಾರ ಬಹಿರಂಗ ಪ್ರಚಾರ ಅಂತ್ಯವಾಯಿತು.
43 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನವಾಗಲಿದೆ. ಉಳಿದ 38 ಸ್ಥಾನಗಳಿಗೆ ನವೆಂಬರ್ 20 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ನೇತೃತ್ವದ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ನಡುವೆ ರಾಜ್ಯದಲ್ಲಿ ಪೈಪೋಟಿ ನಡೆಯುತ್ತಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದ 24 ಜಿಲ್ಲೆಗಳಲ್ಲಿ ಇರುವ ಬುಡಕಟ್ಟು ಸಮುದಾಯದ ಮೇಲೆ ಕಣ್ಣಿಟ್ಟಿದೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರ‍್ಯಾಲಿಗಳನ್ನು ನಡೆಸಿ ಮತಯಾಚನೆ ಮಾಡಿದ್ದಾರೆ.
ಕಾಂಗ್ರೆಸ್ ಪರವಾಗಿ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಜೆಎಂಎಂನಿಂದ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ಪತ್ನಿ, ಶಾಸಕಿ ಕಲ್ಪನಾ ಸೊರೆನ್ ಅವರು ಮುನ್ನಡೆಸಿದ್ದಾರೆ.