ಬೆಳಗಾವಿ, ನ.01: ಅಖಂಡ ಕರ್ನಾಟಕ ನಿರ್ಮಾಣದ ಕನಸು, ನನಸು ಮಾಡಲು ಶ್ರಮಿಸಿದ ನಮ್ಮ ಹಿರಿಯರ ಆಶಯದಂತೆ ಸಮಗ್ರ ಕರ್ನಾಟಕವನ್ನು ಪ್ರಗತಿಪರ ರಾಜ್ಯವನ್ನಾಗಿ ಕಟ್ಟಲು ಎಲ್ಲರೂ ಕೈ ಜೋಡಿಸೋಣ. ಕನ್ನಡ ನಾಡು-ನುಡಿ, ನೆಲ-ಜಲ ಸಂರಕ್ಷಣೆಗೆ ಸರಕಾರ ಸದಾ ಬದ್ಧವಾಗಿರುತ್ತದೆ. ನಾವೆಲ್ಲರೂ ಒಂದಾಗಿ ಕನ್ನಡದ ತೇರನ್ನು ಮುನ್ನಡೆಸೋಣ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ
ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ (ನ.01) ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭುವನೇಶ್ವರಿ ದೇವಿಯ ಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

“ವೇಣುಗ್ರಾಮ”ವೆಂದು ಹೆಸರುವಾಸಿಯಾಗಿದ್ದ ನಮ್ಮ ಬೆಳಗಾವಿಯು ತನ್ನ ವಿಶಿಷ್ಟ ಮತ್ತು ವಾತಾನುಕೂಲ ಪರಿಸರದಿಂದಾಗಿ ಎಲ್ಲರಿಗೂ ಪ್ರಿಯವಾಗಿದೆ. ಐತಿಹಾಸಿಕವಾಗಿ ಜಿಲ್ಲೆಯ ಹಲಸಿ ಗ್ರಾಮವು ಕದಂಬ ಅರಸರ ರಾಜಧಾನಿಯಾಗಿದ್ದ ಸಂಗತಿಯು ಶಾಸನಗಳು ಮತ್ತು ತಾಮ್ರ ಪತ್ರಗಳ ಆಧಾರದಿಂದ ತಿಳಿದುಬರುತ್ತದೆ ಎಂದರು.
ಬ್ರಿಟೀಷರೊಡನೆ ಸ್ವಾತಂತ್ರ‍್ಯ ಹೋರಾಟಕ್ಕೆ ನಾಂದಿ ಹಾಡಿದ ಕಿತ್ತೂರಿನ ರಾಣಿ ಚೆನ್ನಮ್ಮ; ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಪ್ರಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ಮಲ್ಲಮ್ಮ ನಮ್ಮ ನಾಡಿನ ಧೀಮಂತ ಶಕ್ತಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ರಾಜು(ಆಸೀಫ್)ಸೇಠ,
ಮಹಾಪೌರರಾದ ಮಂಗೇಶ ಪವಾರ,
ಉಪಮಹಾಪೌರರಾದ ವಾಣಿ ವಿಲಾಸ ಜೋಶಿ, ನಗರ ಸೇವಕರು, ಬೆಲಘಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ
ಕೆ.ಎಂ.ಜಾನಕಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೋಲಿಸ್ ಆಯುಕ್ತ ಭೋರಸೆ ಗುಲಾಭರಾವ್ ಭೂಷಣ, ಜಿಲ್ಲಾ ಪೋಲಿಸ್ ವರಿಷ್ಠಾಸಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪವಿಭಾಗಾಧಿಕಾರಿ ಶ್ರವಣ ನಾಯಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.


