ಬೆಂಗಳೂರು, ಸೆಪ್ಟೆಂಬರ್ 20: ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳೆಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ 6 ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಲು ನೀತಿ ರೂಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಮುಟ್ಟಿನ ರಜೆ ಸಾಧ್ಯಾಸಾಧ್ಯತೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರದಿಯಾಗಿದೆ.
ಆರಂಭದಲ್ಲಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ.