ನವದೆಹಲಿ,06: ಬರ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ ಡಿಆರ್ ಎಫ್) ನಿಂದ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜುಲೈನಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಸೋಮವಾರ ತಿಳಿಸಿದೆ. ಬರ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರಕ್ಕೆ ಸುಮಾರು ರೂ. 3,400 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಏಪ್ರಿಲ್ 29 ರಂದು ಉನ್ನತ ನ್ಯಾಯಾಲಯಕ್ಕೆ ಹೇಳಿತ್ತು.
ಇಂದು ಈ ವಿಚಾರ ಕೈಗೆತ್ತಿಕೊಂಡ ನ್ಯಾಯಾಧೀಶರಾದ ಬಿಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಈ ವಿಚಾರದಲ್ಲಿ ಸರ್ಕಾರ ಅಫಿಡವಿಟ್ ಸಲ್ಲಿಸಲಿದೆ ಎಂದು ಹೇಳಿದರು. ನ್ಯಾಯಪೀಠ ವಿಚಾರಣೆಯನ್ನು ಜುಲೈಗೆ ಮುಂದೂಡಿತು. ಕಳೆದ ವಾರ ನಡೆದ ವಿಚಾರಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ರೂ. 3,450 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ, ರಾಜ್ಯ ಸರ್ಕಾರ ರೂ. 18,000 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಿರುವುದಾಗಿ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹೇಳಿದರು.
ಎನ್‌ಡಿಆರ್‌ಎಫ್ ಪ್ರಕಾರ ಬರ ಪರಿಹಾರಕ್ಕೆ ಹಣಕಾಸು ನೆರವು ಬಿಡುಗಡೆ ಮಾಡದಿರುವ ಕೇಂದ್ರದ ಕ್ರಮವು ಸಂವಿಧಾನದ 14 ಮತ್ತು 21 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿದ ರಾಜ್ಯದ ಜನರ ಮೂಲಭೂತ ಹಕ್ಕುಗಳ “ಪೂರ್ವಭಾವಿ ಉಲ್ಲಂಘನೆ” ಎಂದು ಘೋಷಿಸಲು ಅರ್ಜಿಯಲ್ಲಿ ಕೋರಲಾಗಿದೆ.
ರಾಜ್ಯ ತೀವ್ರ ಬರದಲ್ಲಿ ತತ್ತರಿಸುತ್ತಿದ್ದು, ಜನರ ಜೀವನ ಮತ್ತು 2023ರ ಮುಂಗಾರಿನ ಮೇಲೆ ಪರಿಣಾಮ ಬೀರಿದೆ. ಜೂನ್ ನಲ್ಲಿ ಆರಂಭವಾಗುವ ಮುಂಗಾರು, ಸೆಪ್ಟೆಂಬರ್ ನಲ್ಲಿ ಕೊನೆಯಾಗಿದ್ದು, ಒಟ್ಟಾರೇ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. 196 ತಾಲ್ಲೂಕುಗಳನ್ನು ತೀವ್ರ ಪೀಡಿತ ಮತ್ತು ಉಳಿದ 27 ಮಧ್ಯಮ ಪೀಡಿತ ಎಂದು ವರ್ಗೀಕರಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.