ಬೆಂಗಳೂರು, ಅಕ್ಟೋಬರ್ 14: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಒಟ್ಟು 12 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಮಾಜಿ ನಿರ್ದೇಶಕಿ ಸುಮಂಗಲಿ ಅವರ ನಿವಾಸದ ಮೇಲೆ 20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಂಗಲಿ ಅವರು ಸದ್ಯ ಅಮಾನತಿನಲ್ಲಿದ್ದರೂ, ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಅವರ ಮೇಲಿದೆ. ಇದೇ ರೀತಿ, ಮಲ್ಲಸಂದ್ರ ಏರಿ ಆಸ್ಪತ್ರೆಯ ವೈದ್ಯಾಧಿಕಾರಿ ಮಂಜುನಾಥ್ ಅವರ ಅನ್ನಪೂರ್ಣೇಶ್ವರಿ ನಗರದ ಮನೆ ಮೇಲೂ ಸುಮಾರು 10ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿಶೇಷ ಭೂಸ್ವಾಧೀನ ಅಧಿಕಾರಿ ಹಾಗೂ ಸರ್ವೇಯರ್ ಗಂಗಾ ಮರಿಗೌಡ ಅವರ ನಿವಾಸದ ಮೇಲೂ ದಾಳಿ ನಡೆದಿದ್ದು, ಶೋಧ ಕಾರ್ಯ ಪ್ರಗತಿಯಲ್ಲಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದರ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.