ಬೆಳಗಾವಿ: ಎಂ.ಕೆ. ಹುಬ್ಬಳ್ಳಿಯ ಮಲಪ್ರಭ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಬರುವ ಆಯವ್ಯಯದಲ್ಲಿ ಆರ್ಥಿಕ ನೆರವು ಒದಗಿಸುವುದಾಗಿ ಭರವಸೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ
ಸುವರ್ಣ ವಿಧಾನಸೌಧದಲ್ಲಿ ಬುಧವಾರ ಸಂಜೆ ಮಲಪ್ರಭ ಸಕ್ಕರೆ ಕಾರ್ಖಾನೆ ಪುನಶ್ಚೇತನ ಪ್ಯಾನೆಲ್ ಮುಖಂಡರಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ಕಾರ್ಖಾನೆಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ನೇತೃತ್ವದಲ್ಲಿ ಕಾರ್ಖಾನೆಯ ನಿರ್ದೇಶಕರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕಾರ್ಖಾನೆಯ ಪುನಶ್ಚೇತನಕ್ಕಾಗಿ ಮನವಿ ಸಲ್ಲಿಸಿದರು.
ಕಾರ್ಖಾನೆಯ ಸದ್ಯದ ಪರಿಸ್ಥಿತಿಯನ್ನು ವಿವರಿಸಿ, ಲಕ್ಷಾಂತರ ರೈತರು ಕಾರ್ಖಾನೆಯ ಮೇಲೆ ಅವಲಂಬಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ತುರ್ತಾಗಿ ಪುನಶ್ಚೇತನಗೊಳಿಸಬೇಕಾಗಿದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ, ಪುನಶ್ಚೇತನ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಸಾಲ ಮುಕ್ತ ಮಾಡಿ ರೈತರಿಗೆ ಶಕ್ತಿ ತುಂಬುವ ಉದ್ದೇಶದಿಂದ ಸರ್ಕಾರ ನೆರವಿಗೆ ಬರಬೇಕು ಎಂದು ನಿಯೋಗ ಮನವಿ ಮಾಡಿತು.

ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರ ರೈತರ ಪರವಾಗಿದೆ. ಕಾರ್ಖಾನೆಯನ್ನು ಉಳಿಸಿ ರೈತರ ಬಾಳಿಗೆ ಬೆಳಕಾಗುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕ ಮುಖಂಡರು ಇದ್ದರು.


