ನೆರೆ ಪ್ರವಾಹ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ
ಬಳ್ಳಾರಿ,ಜು.08
ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ನೆರೆ ಪ್ರವಾಹ ನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ಆಣೆಕಟ್ಟೆ ಜಲಾಶಯವು ನಿಗಧಿತ ವೇಳೆ ಮುಂಚಿತವಾಗಿಯೇ ಭರ್ತಿಯಾಗಿದೆ. ಮುಖ್ಯವಾಗಿ ಈ ಬಾರಿ ಕೇವಲ 80 ರಿಂದ 85 ಟಿಎಂಸಿ ನೀರನ್ನು ಉಳಿಸಿಕೊಳ್ಳಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದ್ದೆ. ಹಾಗಾಗಿ ಪ್ರವಾಹಕ್ಕೀಡಾಗುವ ನದಿ ಪಾತ್ರದ ಗ್ರಾಮಗಳನ್ನು ಸುರಕ್ಷಿತ ಸ್ಥಳದೆಡೆಗೆ ಸ್ಥಳಾಂತರಿಸಬೇಕು ಎಂದು ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಪರಮೇಶ್ ಅವರು ಮಾತನಾಡಿ, ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ 76.731 ಟಿಎಂಸಿ ನೀರು ಸಂಗ್ರಹವಿದ್ದು, 54,550 ಕ್ಯೂಸೆಕ್ ನೀರು ಒಳಹರಿವು ಇದ್ದು, 61,645 ಕ್ಯೂಸೆಕ್ ನೀರು ಹೊರಹರಿವು ಇದೆ ಎಂದು ಹೇಳಿದರು.
ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ನದಿಗೆ ಹರಿಸಿದಾಗ ಮಾತ್ರ ಕಂಪ್ಲಿ ಮತ್ತು ಗಂಗಾವತಿ ಸೇತುವೆ ಮುಳುಗಡೆಯಾಗಲಿದೆ ಮತ್ತು ಕಂಪ್ಲಿ ಭಾಗದ 2 ಗ್ರಾಮ ಮತ್ತು ಸಿರುಗುಪ್ಪ ಭಾಗದ 1 ಗ್ರಾಮವು ಪ್ರವಾಹ ಪಿಡೀತವಾಗುತ್ತದೆ. ಈಗಾಗಲೇ ಸುರಕ್ಷತೆಗಾಗಿ ಕಾಳಜಿ ಕೇಂದ್ರಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಪ್ರವಾಹ ಕುರಿತಾಗಿ ನಿತ್ಯ ಆಯಾ ತಾಲ್ಲೂಕು ತಹಶೀಲ್ದಾರರು ಪರಿಶೀಲನೆ ನಡೆಸುತ್ತಿರಬೇಕು. ನದಿಪಾತ್ರದ ಜನರಿಗೆ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಬೇಕು. ಜನ-ಜಾನುವಾರು ಬಗ್ಗೆ ಎಚ್ಚರವಹಿಸಬೇಕು. ಜೀವಹಾನಿ, ಬೆಳೆಹಾನಿಯಾಗದಂತೆ ಆಯಾ ತಹಶೀಲ್ದಾರರು ಸೂಕ್ತ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಶೇ.49 ರಷ್ಟು ಮಳೆ ಕೊರತೆಯಾಗಿದೆ. ಅದೇರೀತಿಯಾಗಿ ಜುಲೈ ತಿಂಗಳಲ್ಲಿ ಶೇ.9.6 ರಷ್ಟು ಮಳೆ ಸುರಿದಿದ್ದು, ಶೇ.45 ರಷ್ಟು ಮಳೆ ಕೊರತೆಯಾಗಿದೆ. ಹವಮಾನ ಇಲಾಖೆಯ ವರದಿಯನ್ವಯ ಮುಂದಿನ ದಿನಗಳಲ್ಲಿ ಮಳೆಯಾಗುವ ಸಂಭವವಿದೆ. ಜಿಲ್ಲೆಯಲ್ಲಿ ಈಗಾಗಲೇ ಹತ್ತಿ, ಮುಸುಕಿನ ಜೋಳ, ತೊಗರಿ ಬೆಳೆಗಳು ಬಿತ್ತನೆಯಾಗಿದ್ದು, ಖಾರೀಫ್ ಬೆಳೆಗಳ ಬಿತ್ತನೆಗೆ ಇನ್ನೂ ಅವಕಾಶವಿದೆ ಎಂದು ಸಭೆಗೆ ತಿಳಿಸಿದರು.
ಇದಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರತಿಕ್ರಿಯಿಸಿ, ಈಗಾಗಲೇ ತಾಲ್ಲೂಕುವಾರು ಮಳೆ ಕೊರತೆಯಾಗಿರುವ ಕುರಿತು ಆಯಾ ತಾಲ್ಲೂಕು ತಹಶೀಲ್ದಾರರು ಕ್ಷೇತ್ರ ಭೇಟಿ ನಡೆಸಿ ಮಾಹಿತಿ ಸಂಗ್ರಹಿಸಿ ಕೃಷಿ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಜಿಲ್ಲಾಧಿಕಾರಿಯವರು ಚರ್ಚಿಸಿ, ಸಂಬAಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಡಿಡಿಎಲ್‌ಆರ್ ಪ್ರಮೋದ್, ಲೋಕೋಪಯೋಗಿ ಇಲಾಖೆ, ಪಶುಸಂಗೋಪನೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಐದು ತಾಲ್ಲೂಕುಗಳ ತಹಶೀಲ್ದಾರರು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
