ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ (ED) 82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅವರು ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಣತಿಯಂತೆ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ತನಿಖೆ ವೇಳೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.