ಬೆಳಗಾವಿ, ಜುಲೈ 25: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು, ಇಂದು (ಜು.,25) ರಾಯಬಾಗ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿ ಮೇಲಿನ ಕುಡಚಿ ಸೇತುವೆ ಮುಳುಗಡೆಯಾಗಿದ್ದು, ನೀರಿನ ಮಟ್ಟದ ಏರಿಳಿತದ ಕುರಿತು ಮಾಹಿತಿ ಪಡೆದರು. ಬಳಿಕ ಹಳೆ ದಿಗ್ಗೇವಾಡಿಯಲ್ಲಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು.
ಈ ವೇಳೆ ಕುಡಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ಈಗಾಗಲೇ ಅಗತ್ಯ ಮುಂಜಾಗ್ರತಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳನ್ನು ಗುರುತಿಸಲಾಗಿದ್ದು, ಪ್ರವಾಹ ಸಂದರ್ಭದಲ್ಲಿ ಸ್ಥಳಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಸದ್ಯಕ್ಕೆ ಮಹಾರಾಷ್ಟ್ರದಲ್ಲಿ ಮಳೆ ಜಾಸ್ತಿಯಾಗುತ್ತಿದ್ದು, ಮೂರು ಲಕ್ಷ ಕ್ಯೂಸೆಕ್ ನೀರು ಬಿಟ್ಟಾಗ ಪ್ರವಾಹ ಪರಿಸ್ಥಿತಿ ಉದ್ಭವಿಸಿ ತೊಂದರೆಯಾಗಲಿದೆ. ಆದ್ದರಿಂದ ಈ ಬಗ್ಗೆ ನಿರಂತರವಾಗಿ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಸಂಭವನೀಯ ಪ್ರವಾಹ ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮಳೆ ಹೆಚ್ಚಾಗುತ್ತಿರುವುದರಿಂದ ರಕ್ಷಣಾ ತಂಡ, ಕಾಳಜಿ ಕೇಂದ್ರ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ಮಳೆ ಜಾಸ್ತಿಯಾಗಿರುವುದರಿಂದ ಇನ್ನಷ್ಟು ನೀರು ಬರಬಹುದು ಈ ಕುರಿತು ನಿಗಾ ವಹಿಸಲಾಗಿದೆ.
ಅಗತ್ಯ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜನರು ಬಂದರೆ ಯಾವುದೇ ತೊಂದರೆ ಇಲ್ಲ. ಕೆಲವು ಜನರು ಕಾಳಜಿ ಕೇಂದ್ರ ಅಥವಾ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ಹಿಂದೇಟು ಹಾಕುತ್ತಿದ್ದು, ಅಧಿಕಾರಿಗಳು ಅವರ ಮನವೊಲಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಅತಿವೃಷ್ಟಿಯಿಂದ ಮಳೆ ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ರಾಜ್ಯ ಸರಕಾರದಿಂದ ಮೂರು ಲಕ್ಷ ರೂಪಾಯಿ ನೀಡಲು ಚಿಂತನೆ ನಡೆಸಲಾಗುತ್ತಿದೆ. ಇದರೊಂದಿಗೆ ಕೇಂದ್ರ ಸರಕಾರದ ನೆರವು ಒದಗಿಸುವುದರ ಜತೆಗೆ ಇತರೆ ಯೋಜನೆಗಳ ಪ್ರಯೋಜನ ಕೂಡ ಒದಗಿಸಲಾಗುವುದು ಎಂದು ತಿಳಿಸಿದರು.
ಐದು ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾಗ ಎಲ್ಲರಿಗೂ ಪರಿಹಾರ ತಲುಪಿಸುವುದು ಸಾಧ್ಯವಾಗಿರುವುದಿಲ್ಲ. ಆದ್ದರಿಂದ ನೆರವು ಮೊತ್ತ ಕಡಿಮೆಯಾದರೂ ಸರಿ ಎಲ್ಲರಿಗೂ ಪರಿಹಾರ ತಲುಪಿಸುವುದು ಸರಕಾರದ ಉದ್ದೇಶವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಜಿಲ್ಲೆಯ ಪರಿಸ್ಥಿತಿಯ ಕುರಿತು ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲೆಯಲ್ಲಿ ಸದ್ಯಕ್ಕೆ 35 ಬೋಟ್ ಲಭ್ಯವಿದ್ದು, ಹೆಚ್ಚು ಬೋಟ್ ಗಳು ಅವಶ್ಯವಿದ್ದಲ್ಲಿ ಕಾರವಾರದಿಂದ ತರಿಸಲಾಗುವುದು. ಸದ್ಯಕ್ಕೆ ಆತಂಕಪಡುವ ಪರಿಸ್ಥಿತಿ ಇಲ್ಲ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಮೂರು ದಿನ ರೆಡ್ ಅಲರ್ಟ್ ಇರುತ್ತದೆ. ನೀರು ಬಿಡುಗಡೆ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಪರಿಸ್ಥಿತಿ ಆಧರಿಸಿ ಗ್ರಾಮಸ್ಥರನ್ನು ಕಾಳಜಿ ಕೇಂದ್ರಗಳಿಗೆ ಜನರನ್ನು ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಖಾನಾಪುರದಲ್ಲಿ ಎನ್.ಡಿ.ಆರ್.ಎಫ್. ತಂಡವನ್ನು ಕೂಡ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ, ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ರಾಯಬಾಗ ತಹಶೀಲ್ದಾರ ಕೆ.ಎಸ್ ಕುಲಕರ್ಣಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.