ಬೆಳಗಾವಿ,ಏಪ್ರಿಲ್ 16: : ಹುಬ್ಬಳ್ಳಿ -ಧಾರವಾಡಕ್ಕೆ ಹೋಲಿಸಿದರೆ ಬೆಳಗಾವಿ ಜಿಲ್ಲೆಗೆ ಆಗಿರುವ ಅಸಮಾನತೆಗೆ ಕಾರಣರಾದವರಿಗೆ ಉತ್ತರ ಕೊಡುವ ಸಮಯ ಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಬಾರ್ ಅಸೋಸಿಯೇಷನ್ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ಜಿಲ್ಲೆಗೆ ಅನ್ಯಾಯ ಮಾಡಿದವರನ್ನು ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗಲೇ ಏನೂ ಮಾಡದವರು ಈಗ ಬೆಳಗಾವಿಗೆ ಬಂದು ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಏನೂ ಮಾಡಲು ಅವರಿಂದ ಸಾಧ್ಯವಾಗಲಿಲ್ಲ. ಬದಲಾಗಿ ಹೈಕೋರ್ಟ್ ಪೀಠ, ಐಐಐಟಿ, ಆಕ್ಸಿಜನ್ ಸಿಲೆಂಡರ್ ವಿಷಯದಲ್ಲಿ ಅನ್ಯಾಯ ಮಾಡಿದರು. ಈಗ ಬಂದು ಏನು ಮಾಡುತ್ತಾರೆ? ಕೇವಲ ಅಧಿಕಾರದ ಹಿಂದೆ ಓಡಾಡುವ ಇಂಥ ವ್ಯಕ್ತಿ ಜಿಲ್ಲೆಗೆ ಬೇಕಾ ಎಂದು ಪ್ರಶ್ನಿಸಿದರು.
ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿ, ಆ ಪಕ್ಷದ ಮುಖಂಡರನ್ನೇ ನಿಂದಿಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದರು. ಕೇವಲ ಮೂರು ತಿಂಗಳ ಹಿಂದಷ್ಟೇ ಬಿಜೆಪಿ ನಾಯಕರ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದ ವ್ಯಕ್ತಿ ಇಂದು ಏಕಾಏಕಿ ಬಿಜೆಪಿ ಸೇರಿ ಮೋದಿ ಅವರನ್ನು ಪ್ರಧಾನಿ ಮಾಡಬೇಕೆಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.
ದ್ವಂದ್ವ ನಿಲುವು, ಅಧಿಕಾರ ಬೇಕೇ ಬೇಕು ಎಂಬ ಹಪಾಹಪಿಯವರಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸ್ಥಾನದಿಂದ ಇಳಿದ ಮೇಲೆ ಮಂತ್ರಿಯಾದರು. ಇವರಿಗೆ ಅಧಿಕಾರವೇ ಮುಖ್ಯ ಎಂದು ಆರೋಪಿಸಿದರು. ಪ್ರಹ್ಲಾಜ ಜೋಶಿ, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಚೆ, ರಮೇಶ ಜಿಗಜಿಣಗಿ, ಜಗದೀಶ್ ಶೆಟ್ಟರ್ ಸೇರಿದಂತೆ ಡಜನ್ ಗಟ್ಟಲೆ ಬಿಜೆಪಿ ಅಭ್ಯರ್ಥಿಗಳು ಚುನಾವಣೆಗೂ ಮೊದಲೇ ಕೇಂದ್ರದಲ್ಲಿ ಮಂತ್ರಿಯಾಗುವ ಕನಸಿನಲ್ಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯವಾಡಿದರು.