ಬೆಳಗಾವಿ: ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಮನವಿಯನ್ನು ಸ್ವೀಕರಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದ ಪ್ರತಿಭಟನಕಾರರು, ರಾಜ್ಯದಲ್ಲಿರುವ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಆದ್ಯತೆ ಸಿಗಬೇಕು. ರಾಜ್ಯ ಸರ್ಕಾರ ರೂಪಿಸಿದ ಕಾನೂನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು’ ಎಂದು ಸಚಿವರನ್ನು ಒತ್ತಾಯಿಸಿದರು.
ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ವಿಚಾರವಾಗಿ ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿದ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಸರ್ಕಾರದಿಂದ ಭೂಮಿ ಒದಗಿಸಿದ್ದರೆ ಹಿಂಪಡೆಯಬೇಕು. 15 ವರ್ಷಗಳಿಂದ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸಿ, ಅವರಿಗೆ ಕನ್ನಡ ಬರವಣಿಗೆ ಪರೀಕ್ಷೆ ಆಯೋಜಿಸಬೇಕು’ ಎಂದು ಮನವಿ ಮಾಡಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಶೀಘ್ರದಲ್ಲೇ ಈ ಕುರಿತು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಕನ್ನಡಿಗರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಸಂಚಾಲಕ ಮಹಾದೇವ ತಳವಾರ, ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಗಣೇಶ ರೋಕಡೆ, ಸತೀಶ ಗುಡದವರ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.