ಬೆಳಗಾವಿ: ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಕ್ಕೆ ಕಾನೂನು ಹೋರಾಟ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಬವಿಸಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.
ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಷ್ಟೇ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರಷ್ಟೇ, ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಬವಿಸಲ್ಲ ಎಂದರು.
ದೇಶದ ಎಲ್ಲಾ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ 25 ಸಚಿವರ ಮೇಲೆ ಕೇಸ್ ದಾಖಲಾಗಿವೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿವೆ. ಆದರೆ ಅದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ವಿರೋಧ ಪಕ್ಷದ ಆಡಳಿತ ಇರುವ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ಮುಂದುವರೆಸಿದ್ದು, ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಕಗ್ಗೊಲೆಗೆ ಮುಂದಾಗಿದೆ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಕೇಂದ್ರದ ಅಣತಿಯಂತೆ ನಡೆದು, ನಿರಾಧಾರವಾದ ಮುಡಾ ಆರೋಪಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ರಾಜಕೀಯ ಪ್ರೇರಿತವಾದ ರಾಜ್ಯಪಾಲರ ಈ ನಡೆಯನ್ನು ನಾನು ಖಂಡಿಸುತ್ತೇನೆ. ಇಂತಹ ಷಡ್ಯಂತ್ರ ವಿರುದ್ಧ ನಮ್ಮ ಸರ್ಕಾರವು ಸೂಕ್ತ ಕಾನೂನು ಹೋರಾಟ ನಡೆಸಲಿದೆ. ಸಿಎಂ ಸಿದ್ದರಾಮಯ್ಯನವರ ಬೆಂಬಲಕ್ಕೆ ಎಲ್ಲಾ ಶಾಸಕರು, ಸಚಿವರು ಹಾಗೂ ಹೈಕಮಾಂಡ್ ಕೂಡ ನಿಲ್ಲುತ್ತದೆ ಎಂದು ತಿಳಿಸಿದರು.