ಜಮಖಂಡಿ;ತುಬಚಿ, ತುಂಗಳ ಹಾಗೂ ಜುಂಝರವಾಡ ಗ್ರಾಮಗಳ ಸರಹದ್ದಿನಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಕಾಣಿಸಿಕೊಂಡಿರುವುದರಿಂದ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ. ಚಿರತೆಯ ಸಂಚಾರದಿಂದ ಗ್ರಾಮಸ್ಥರು ಭಯಭಿತರಾಗಿರುವ ಹಿನ್ನೆಲೆಯಲ್ಲಿ ಶಾಸಕ ಜಗದೀಶ ಗುಡಗುಂಟಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚಿರತೆ ಕುರುಹು ಕಂಡುಬಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಶಾಸಕರು, ಗ್ರಾಮಸ್ಥರ ಸುರಕ್ಷತೆ ದೃಷ್ಟಿಯಿಂದ ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸುವಂತೆ ಸೂಚಿಸಿದರು. ಚಿರತೆಯನ್ನು ಹಿಡಿಯಲು ಅಗತ್ಯವಿರುವ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುವುದು, ಹೆಚ್ಚುವರಿ ಬೋನುಗಳನ್ನು ಅಳವಡಿಸುವುದು ಹಾಗೂ ಕ್ಯಾಮರಾಗಳನ್ನು ಸ್ಥಾಪಿಸಿ ನಿಗಾವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ತಿಳಿಸಿದ ಅವರು, ಜನರು ಭಯಪಡದೆ ಎಚ್ಚರಿಕೆಯಿಂದ ಇರಬೇಕು ಹಾಗೂ ಅರಣ್ಯ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಊರಿನ ಹಿರಿಯರು, ರೈತರು, ಅರಣ್ಯ ಹಾಗೂ ಇತರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸಮಸ್ಯೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.


