ಬೈಲಹೊಂಗಲ,ಏಪ್ರಿಲ್ 18: : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರಿಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುನ್ನಡೆ ಖಚಿತ ಎಂದು ಶಾಸಕ ಮಹಾಂತೇಶ್ ಕೌಜಲಗಿ ವಿಶ್ವಾಸ ವ್ಯಕ್ತಪಡಿಸಿದರು.
ಬೈಲಹೊಂಗಲ ವಿಧಾನಸಭಾ ವ್ಯಾಪ್ತಿಯ ಯಕ್ಕುಂಡಿ, ಬಡ್ಲಿ ಹಾಗೂ ಬೈಲಹೊಂಗಲ ಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಶಾಸಕರು, ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ ಎಂದರು.
ಕಳೆದ 10 ತಿಂಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಬಡವರ, ದೀನ ದಲಿತರ ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪುತ್ತಿವೆ. ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಶಾಸಕರು ಕರೆ ನೀಡಿದರು.
*ಶೆಟ್ಟರ್ ಹುಬ್ಬಳ್ಳಿಗೆ, ಮೃಣಾಲ್ ದೆಹಲಿಗೆ*
ಇದೇ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಅತ್ಯಧಿಕ ಮತಗಳಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿ ದೆಹಲಿಗೆ ಕಳುಹಿಸೋಣ, ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಿ ಮನೆಗೆ ಕಳುಹಿಸೋಣ ಎಂದು ಕರೆ ನೀಡಿದರು. ಮೃಣಾಲ್ ಹೆಬ್ಬಾಳ್ಕರ್ ಗೆದ್ದರೆ, ನನ್ನ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲೆಯ ಎಲ್ಲ ಶಾಸಕರ ಮಾರ್ಗದರ್ಶನದಲ್ಲಿ ಕೆಲಸ ಮಾಡಲಿದ್ದಾನೆ. ಕ್ಷೇತ್ರವನ್ನ ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸು ಹೊಂದಿದ್ದಾನೆ ಎಂದು ಹೇಳಿದರು.