ನವದೆಹಲಿ, ಸೆಪ್ಟೆಂಬರ್ 10:ಭಾರತದ ಬಗ್ಗೆ ಅಮೆರಿಕ(America) ದ ಮೃದು ಧೋರಣೆ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳು ಎರಡೂ ದೇಶಗಳ ನಡುವಿನ ಸಂಬಂಧಗಳು ಮತ್ತೆ ಹಳಿಗೆ ಬರುವ ಭರವಸೆಯನ್ನು ಹುಟ್ಟುಹಾಕಿವೆ. ಇದಕ್ಕೂ ಮೊದಲು, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಲು ಎದುರು ನೋಡುತ್ತಿರುವುದಾಗಿ ಟ್ರಂಪ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಎರಡೂ ದೇಶಗಳ ಜನರಿಗೆ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಭಾರತ ಮತ್ತು ಅಮೆರಿಕ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು, ನಮ್ಮ ವ್ಯಾಪಾರ ಮಾತುಕತೆಗಳು ಭಾರತ-ಅಮೆರಿಕ ಪಾಲುದಾರಿಕೆಯ ಅಗಾಧ ಸಾಮರ್ಥ್ಯವನ್ನು ಅನಾವರಣಗೊಳಿಸಲು ದಾರಿ ಮಾಡಿಕೊಡುತ್ತವೆ ಎಂದು ನನಗೆ ವಿಶ್ವಾಸವಿದೆ. ನಮ್ಮ ತಂಡಗಳು ಈ ಚರ್ಚೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಕೆಲಸ ಮಾಡುತ್ತಿವೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ. ಎರಡೂ ದೇಶಗಳ ಜನರಿಗೆ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಬರೆದಿದ್ದಾರೆ.