ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ನೆರವಾದ ಪ್ರತಿಯೊಬ್ಬರಿಗೂ ಮೋದಿ ಧನ್ಯವಾದ ಅರ್ಪಿಸಿದರು. ‘ಸ್ನೇಹ ಮಿಲನ್’ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಶೇಷ ಎಂದರೆ ಮೂರನೇ ಬಾರಿ ಪ್ರದಾನಿ ಪಟ್ಟಕ್ಕಲೇರಿದ ಬಳಿಕ ಕಾರ್ಯಕರ್ತರೊಂದಿಗೆ ಮೋದಿ ನಡೆಸಿದ ಮೊದಲ ಸಮಾಲೋಚನೆ ಇದಾಗಿದೆ.
ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ಮೋದಿ ಅವರನ್ನು ಪಕ್ಷದ ಕಚೇರಿಗೆ ಸ್ವಾಗತಿಸಿದರು. ಎರಡೂವರೆ ಗಂಟೆಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.
ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ಮೋದಿ ಬಣ್ಣಿಸಿದರು. ತವರು ರಾಜ್ಯ ಗುಜರಾತ್ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ದಿನಗಳನ್ನು ನೆನಪಿಸಿಕೊಂಡ ಅವರು, ತಮ್ಮ ಅನುಭವಗಳನ್ನು ಹಂಚಿಕೊಂಡರು ಮತ್ತು ಸೀಮಿತ ಸಂಪನ್ಮೂಲಗಳೊಂದಿಗೆ ಪಕ್ಷವು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಬಹಿರಂಗಪಡಿಸಿದರು.