ನೆಲಮಂಗಲ, ಜುಲೈ 12: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳು ಈ ಸರ್ಕಾರಕ್ಕೆ ಎರಡು ಕಪ್ಪು ಚುಕ್ಕೆಗಳು ಇದ್ದಂತೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಒಂದು ಮುಡಾ ಹಗರಣ, ಇನ್ನೊಂದು ವಾಲ್ಮೀಕಿ ನಿಗಮ ಹಗರಣ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ಕಾರ್ಯಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೇ ಬರೀ ಲೂಟಿ ಮಾಡದೇ ಕೆಲಸ ಆಗಿದೆ ಎಂದು ಟೀಕಿಸಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ. ಬಿಜೆಪಿ ಮುಖಂಡರನ್ನು ಮನೆ ಬಳಿಯೇ ಬಂಧಿಸುವ ಕೆಲಸ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ತುರ್ತುಪರಿಸ್ಥಿತಿ ಜಾರಿಗೊಳಿಸಿದೆ ಎನಿಸುತ್ತಿದೆ. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವ ಕೆಲಸ ಮಾಡುತ್ತಿದೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಸರ್ಕಾರ ಬರೀ ಹಗರಣಗಳ ಸರಮಾಲೆಯಾಗಿದೆ. ವಾಲ್ಮೀಕಿ ನಿಗಮದ ದಲಿತರ ನೂರು ಪರ್ಸೆಂಟ್ ಹಣ ನುಂಗಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳಗಿದೆ. ಮೈಸೂರು ಮುಡಾ ಹಗರಣ ಹೊರತೆಗೆದ ಸಂದರ್ಭದಲ್ಲಿ ಬಿಜೆಪಿಗೆ ಮಾಡೋದಕ್ಕೆ ಕೆಲಸ ಇಲ್ಲ ಎಂದರು ಸಿದ್ದರಾಮಯ್ಯ. ನಾವು ಜನರ ಮುಂದೆ ಇಡುತ್ತಾ ಇದ್ದೇವೆ. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದು ಅಶೋಕ್ ಹೇಳಿದರು.