ಬಳ್ಳಾರಿ ಜುಲೈ 07 : ಇಂದಿನ ಮಾಧ್ಯಮಗಳು ಊಹಾಪೋಹದ ಕಪೋಲ ಕಲ್ಪಿತವಾದ ಸುದ್ದಿಗಳನ್ನು ಬಿತ್ತರಿಸುತ್ತಿವೆ ಇದು ಸಮಾಜಕ್ಕೆ ಅತ್ಯಂತ ಅಪಾಯಕಾರಿಯಾದುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಬೇಸರವನ್ನು ವ್ಯಕ್ತಪಡಿಸಿದರು.
ಅವರು ಇಂದು ಬಳ್ಳಾರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿಸಿ ಕಚೇರಿಯ ಆವರಣದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ , ತಮ್ಮ ಮಾಧ್ಯಮಗಳಲ್ಲಿ ನಿಖರವಾದ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಸಮಾಜಕ್ಕೆ ಅನುಕೂಲವಾಗಬೇಕೆ ವಿನಹ ಸಮಾಜದಲ್ಲಿ ಕಲಹಗಳನ್ನು ಸೃಷ್ಟಿಸುವಂತೆ ಇರಬಾರದು ನಿಖರವಾದ ಮತ್ತು ಸತ್ಯದಿಂದ ಕೂಡಿದ ವರದಿಗಳು ನಿಮಗೆ ಮತ್ತು ನಿಮ್ಮ ಪತ್ರಿಕೆಗೆ ಹೆಸರು ತಂದು ಕೊಡಲಿವೆ ಕಾರಣ ವರದಿಗಾರರು ತಾವು ಮಾಡಲಿರುವ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಬಿತ್ತರಿಸಬೇಕು ಎಂದು ವರದಿಗಾರರಿಗೆ ಕಿವಿಮಾತು ಹೇಳಿದರು.
ಮುಖ್ಯಮಂತ್ರಿಗಳು ಈಗಾಗಲೇ ಪತ್ರಕರ್ತರಿಗೆ ಹಲವು ಸೌಲಭ್ಯಗಳನ್ನು ಪ್ರಕಟಿಸಿದ್ದಾರೆ ಜೊತೆಗೆ ಮುಂದಿನ ದಿನಗಳಲ್ಲಿ ನಿವೇಶನವನ್ನು ಸಹ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಭರವಸೆಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾನಿಪ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು, ಬಳ್ಳಾರಿ ಜಿಲ್ಲಾ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ , ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಶೋಭಾರಾಣಿ ವಿ ಜೆ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ಇತರರು ಮಾತನಾಡಿದರು. ದಾವಣಗೆರೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಶಿವಕುಮಾರ್ ಕನಸೋಗಿ ವರದಿಗಾರಿಕೆಯ ಬಗ್ಗೆ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದು ಪಾಸಾದ ಪತ್ರಕರ್ತರ ಮಕ್ಕಳನ್ನು ಸನ್ಮಾನಿಸಲಾಯಿತು. ಮತ್ತು ಪತ್ರಿಕಾ ದಿನಾಚರಣೆ ಪ್ರಯುಕ್ತ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜಯಿಯಾದ ಕುರುಗೋಡು ಬುಲ್ಸ್ ತಂಡಕ್ಕೆ ಪ್ರಶಸ್ತಿಯನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎನ್ ವೀರಭದ್ರಗೌಡ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಡಾಕ್ ಸಮಿತಿ ಸದಸ್ಯರುಗಳು ಸಂಘದ ಹಾಲಿ ಮಾಜಿ ಪದಾಧಿಕಾರಿಗಳು ಮತ್ತು ಸದಸ್ಯರಿದ್ದರು.