ಬಳ್ಳಾರಿ, ಆ.27:: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. 2011ರಿಂದ ನಿವೃತ್ತರಾದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹೆಚ್ಚುವರಿ ಬಿಎಲ್‌ಒ ಜವಾಬ್ದಾರಿ ಹೇರಬಾರದು, ಸರ್ವೇ ಕಾರ್ಯದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಸರ್ವೇ ವೇಳೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದವರಿಗೆ ವೈದ್ಯಕೀಯ ವೆಚ್ಚ ಹಾಗೂ ಮೃತಪಟ್ಟವರಿಗೆ ₹30 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಗಿದೆ.
ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ-ಯುಕೆಜಿ ಆರಂಭಿಸುವ ಮೂಲಕ ಅಂಗನವಾಡಿ ವ್ಯವಸ್ಥೆಯನ್ನು ಬಲಪಡಿಸಬೇಕು. ಮಕ್ಕಳ ಪೌಷ್ಟಿಕ ಆಹಾರಕ್ಕೆ ನೀಡುತ್ತಿರುವ ತರಕಾರಿ ವೆಚ್ಚವನ್ನು ಹೆಚ್ಚಿಸಬೇಕು ಹಾಗೂ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಡಿಎ ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ಹೆಚ್ಚಿಸಿ, ನಿವೃತ್ತರಿಗೆ ಮಾಸಿಕ ಪಿಂಚಣಿ ನೀಡಬೇಕು. ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಸಾಮಗ್ರಿಗಳನ್ನು ಇಲಾಖೆಯಿಂದಲೇ ಪೂರೈಸಬೇಕು ಹಾಗೂ ಸಾಗಾಣಿಕೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಲಾಗಿದೆ.
ಇದರ ಜೊತೆಗೆ ಋತುಚಕ್ರದ ರಜೆ, ಉತ್ತಮ ಗುಣಮಟ್ಟದ ಸಮವಸ್ತ್ರ, ಆರೋಗ್ಯ ಸೌಲಭ್ಯ ಹಾಗೂ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಬಿಡುಗಡೆಯಾಗುವ ಅನುದಾನದ ಸಮರ್ಪಕ ಬಳಕೆಗೆ ಸ್ಪಷ್ಟ ಮಾರ್ಗಸೂಚಿ ಸೇರಿದಂತೆ ಒಟ್ಟು 32 ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ.
ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿ ವಯೋಮಿತಿಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.
ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ಸರ್ಕಾರವನ್ನು ಒತ್ತಾಯಿಸಿದೆ.