ಬಳ್ಳಾರಿ, ನ.02:.ಗಡಿನಾಡು ಬಳ್ಳಾರಿಯಲ್ಲಿ ಕನ್ನಡ ಭಾಷೆ, ನೆಲ, ಜಲ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕನ್ನಡ ಚೈತನ್ಯ ವೇದಿಕೆ ಕಳೆದ 25 ವರ್ಷಗಳಿಂದ ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು.
ನಗರದ ಕನ್ನಡ ಚೈತನ್ಯ ವೇದಿಕೆಯ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಸಾಮೂಹಿಕ ಜವಾಬ್ದಾರಿಯಾಗಿದೆ. ಕನ್ನಡಿಗರು ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಕನ್ನಡದ ಏಳಿಗೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕನ್ನಡ ಚೈತನ್ಯ ವೇದಿಕೆಯ ಅಧ್ಯಕ್ಷ ಬಿ.ಎಸ್. ಪ್ರಭುಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಶುಭ ಹಾರೈಸಿದರು.
ಮಹಾನಗರ ಪಾಲಿಕೆ ಸದಸ್ಯರಾದ ಕೆ.ಎಸ್. ಅಶೋಕ್, ಕಿಟ್ಟು ಹಾಗೂ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಪ್ರಕಾಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ವೇಷಭೂಷಣಗಳ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಳಿಕ ಕನ್ನಡ ಭುವನೇಶ್ವರಿಯ ಭವ್ಯ ಮೆರವಣಿಗೆ ನಡೆಸಲಾಯಿತು. ಹಿರಿಯ ಪತ್ರಕರ್ತರಾದ ರಘುರಾಮ್ ಶೆಟ್ಟಿ ಹಾಗೂ ಕನ್ನಡ ಚೈತನ್ಯ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಪ್ರಕಾಶ್ ಸೇರಿದಂತೆ ನೂರಾರು ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.