ಬೀಳಗಿ- ಶಾಲಾ-ಕಾಲೇಜು ಹಂತದಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಾಕಷ್ಟು ಅವಕಾಶಗಳಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಹೊರತರಲು ದಸರಾ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.
ಪಟ್ಟಣದ ವೀರ ಸಿಂಧೂರ ಲಕ್ಷ್ಮಣ ತಾಲ್ಲೂಕು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದಸರಾ ಕ್ರೀಡಾಕೂಟಗಳು ವಿವಿಧ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸುತ್ತವೆ. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ಸ್ಪರ್ಧಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಮಾತನಾಡಿ, ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಬೇಕು. ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ಮತ್ತು ಅವಕಾಶಗಳನ್ನು ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಪುರುಷರ ವಿಭಾಗದ ಅಥ್ಲೆಟಿಕ್ಸ್ ಹಾಗೂ ಗುಂಪು ಸ್ಪರ್ಧೆಗಳು, ಮಹಿಳೆಯರ ವಿಭಾಗದ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶಿಲ್ದಾರ್ ವಿನೋದ ಹತ್ತಳ್ಳಿ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಸಿಪಿಐ ಹನಮಂತ ಸಣಮನಿ, ಎಸ್.ಎ.ಎತ್ತಿನಮನಿ ಇದ್ದರು.