Also read
ಹುಬ್ಬಳ್ಳಿ : ವೀರವನಿತೆ ಕಿತ್ತೂರು ರಾಣಿ ಚನ್ನಮ್ಮಾಜಿಯವರನ್ನು ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು ಹಾಗೂ 1824ರ ಕಿತ್ತೂರು ಬ್ರಿಟಿಷರ ವಿರುದ್ಧದ ಹೋರಾಟವನ್ನು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಆರಂಭಿಕ ಮಹತ್ವದ ಅಧ್ಯಾಯವೆಂದು ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು ಎಂದು ಆಗ್ರಹಿಸಿ ಕಿತ್ತೂರು ರಾಣಿ ಚೆನ್ನಮ್ಮ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯಿಂದ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಹುಬ್ಬಳ್ಳಿಯ ನಿವಾಸದಲ್ಲಿ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ, ರಾಣಿ ಚನ್ನಮ್ಮನವರ ಇತಿಹಾಸಕ್ಕೆ ರಾಷ್ಟ್ರಮಟ್ಟದಲ್ಲಿ ಸೂಕ್ತ ಗೌರವ ಮತ್ತು ಅಧಿಕೃತ ಮನ್ನಣೆ ದೊರಕಿಸಿಕೊಡುವಂತೆ ಒತ್ತಾಯಿಸಿದರು.
ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ 1824ರಲ್ಲಿಯೇ ಕೆಚ್ಚೆದೆಯಿಂದ ಹೋರಾಡಿ, ದೇಶದ ಸ್ವಾತಂತ್ರ್ಯ, ಸ್ವಾಭಿಮಾನ ಹಾಗೂ ಸ್ವತಂತ್ರ ಅಸ್ತಿತ್ವಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಧೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮಾಜಿಯವರು. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಸುಮಾರು 33 ವರ್ಷಗಳ ಮುಂಚೆಯೇ ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ನಡೆಸಿದ ಕೀರ್ತಿ ಕಿತ್ತೂರು ರಾಣಿ ಚನ್ನಮ್ಮನವರಿಗೆ ಸಲ್ಲುತ್ತದೆ. ಇಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರ್ತಿಯ ಇತಿಹಾಸ, ತ್ಯಾಗ ಹಾಗೂ ಸಾಹಸಕ್ಕೆ ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಅಧಿಕೃತ ಮನ್ನಣೆ ದೊರೆಯಬೇಕಾಗಿದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.
ರಾಣಿ ಚನ್ನಮ್ಮಾಜಿಯವರನ್ನು ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು, 1824ರ ಕಿತ್ತೂರು ಹೋರಾಟವನ್ನು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಆರಂಭಿಕ ಮಹತ್ವದ ಅಧ್ಯಾಯವೆಂದು ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು, ರಾಣಿ ಚನ್ನಮ್ಮನವರ ಜೀವನ ಚರಿತ್ರೆ, ಹೋರಾಟ ಮತ್ತು ತ್ಯಾಗವನ್ನು ರಾಷ್ಟ್ರೀಯ ಪಠ್ಯಪುಸ್ತಕಗಳಲ್ಲಿ ಸೂಕ್ತವಾಗಿ ಅಳವಡಿಸಬೇಕು, ಅವರ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಸ್ಮಾರಕ ಹಾಗೂ ಅಧ್ಯಯನ ಕೇಂದ್ರ ಸ್ಥಾಪಿಸಬೇಕು ಮತ್ತು ಪ್ರತಿವರ್ಷ ಅಕ್ಟೋಬರ್ 23ರಂದು ಆಚರಿಸುವ ಕಿತ್ತೂರು ವಿಜಯೋತ್ಸವವನ್ನು ರಾಷ್ಟ್ರಮಟ್ಟದ ಉತ್ಸವವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಈ ಐತಿಹಾಸಿಕ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಸತ್ತಿನ ಅಧಿವೇಶನದಲ್ಲಿ ಧ್ವನಿ ಎತ್ತುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಅವರಿಗೆ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿದ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ಕಿತ್ತೂರು ರಾಣಿ ಚನ್ನಮ್ಮಾಜಿಯವರ ಐತಿಹಾಸಿಕ ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಅಧಿಕೃತ ಮನ್ನಣೆ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ರಾಣಿ ಚನ್ನಮ್ಮನವರನ್ನು ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಘೋಷಿಸುವ ಬೇಡಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವ ಅಗತ್ಯವಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ರಾಣಿ ಚೆನ್ನಮ್ಮನವರ ಸಾಹಸ, ತ್ಯಾಗ ಹಾಗೂ 1824ರ ಬ್ರಿಟಿಷರ ವಿರುದ್ಧದ ಹೋರಾಟದ ಐತಿಹಾಸಿಕ ಮಹತ್ವವನ್ನು ತಂದು, ರಾಷ್ಟ್ರಮಟ್ಟದಲ್ಲಿ ಸೂಕ್ತ ಮಾನ್ಯತೆ ದೊರಕಿಸಲು ಪ್ರಯತ್ನಿಸಲಾಗುವುದು. ಈ ಮಹತ್ವದ ಕಾರ್ಯಕ್ಕೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚನ್ನಮ್ಮನ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಅಭಿವೃದ್ಧಿ ಮತ್ತು ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.