ಬಳ್ಳಾರಿ,ಸೆ.12: ಪ್ರಸಕ್ತ ವರ್ಷದ ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಹಾಗೂ ಕುಡುತಿನಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಸೂಕ್ಷö್ಮ ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಕಂಪ್ಲಿ ಪೊಲೀಸ್ ಠಾಣಾ ಸರಹದ್ದಿಗೆ ಒಳಪಡುವ ನಂ.15 ಗೋನಾಳ, ನಂ.10 ಮುದ್ದಾಪುರ ಹಾಗೂ ಕುಡುತಿನಿ ಠಾಣಾ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಈ ಮೂರು ಗ್ರಾಮಗಳಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದು, ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದರೆ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಎಂಬುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಹಾಗೂ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ ಹೇರುವಂತೆ ಪೊಲೀಸ್ ಇಲಾಖೆ ಕೋರಿರುವ ಕಾರಣ, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಮೇಲ್ಕಂಡ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಆದೇಶಿಸಿದ್ದು, ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ, ಹಬ್ಬದ ನೆಪದಲ್ಲಿ ಯಾವುದೇ ರೀತಿಯ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ಜನಸಂದಣಿ ಸೇರುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.