ಬಳ್ಳಾರಿ, ಅ.30: ವಿಧಾನ ಪರಿಷತ್ ಚುನಾವಣೆಯಲ್ಲಿ ರಾಜ್ಯದ ನಾಲ್ಕೂ ಸ್ಥಾನಗಳನ್ನು ಬಿಜೆಪಿ ಗೆದ್ದಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಮತದಾರರು ವ್ಯಕ್ತಪಡಿಸಿರುವ ಅಸಮಾಧಾನದ ಪ್ರತೀಕ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರು, ಪದವೀಧರರು ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಲಕ್ಷಿಸಿರುವ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರ ಕೊರತೆ, ರೈತರ ಸಮಸ್ಯೆಗಳು ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು. ವಿಶ್ವವಿದ್ಯಾಲಯಗಳು ಅತಿಥಿ ಉಪನ್ಯಾಸಕರನ್ನೇ ಅವಲಂಬಿಸಿರುವುದು ಶಿಕ್ಷಣ ಕ್ಷೇತ್ರದ ಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಚುನಾವಣೆಯಲ್ಲಿ ಎನ್ಡಿಎಗೆ ಬೆಂಬಲ ನೀಡಿದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅವರು, ಗೆಲುವಿಗಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರನ್ನು ಶ್ಲಾಘಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್. ದಿವಾಕರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.