ಬಾಗಲಕೋಟೆ, ಜೂನ್ ೨೫: ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಶಿಕ್ಷಣದ ಗುಣಮಟ್ಟ ಸುಧಾರಣೆ ಹಾಗೂ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಬಾಗಲಕೋಟೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಗಜಾನನ ಬಾಳೆ, ಐಎಎಸ್ ಅವರು ಹುನಗುಂದ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವಾ ಸಂಸ್ಥೆಗಳಿಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು.
ಕ್ಷೇತ್ರ ಭೇಟಿಯ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಕಾಮಗಾರಿಗಳ ಗುಣಮಟ್ಟ, ಪ್ರಗತಿ ಹಾಗೂ ಸಾರ್ವಜನಿಕರಿಗೆ ದೊರೆಯುವ ಪ್ರಯೋಜನಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು. ಗ್ರಾಮೀಣ ಜನತೆಗೆ ನಿರಂತರ ಹಾಗೂ ಗುಣಮಟ್ಟದ ಕುಡಿಯುವ ನೀರು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ನಂತರ ಬಿಡಿಓಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ೩ ಎಂಬಿಟಿ ಹಾಗೂ ಹಿರೇಕೆಡಗಲಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಗಳನ್ನು ಪರಿಶೀಲಿಸಿದರು. ಕಾಮಗಾರಿಗಳ ಪ್ರಗತಿ, ತಾಂತ್ರಿಕ ಗುಣಮಟ್ಟ ಹಾಗೂ ನಿರ್ವಹಣಾ ಕ್ರಮಗಳನ್ನು ಪರಿಶೀಲಿಸಿದ ಅವರು, ಯೋಜನೆಯಿಂದ ಪ್ರಯೋಜನ ಪಡೆಯಲಿರುವ ಗ್ರಾಮಗಳ ಜನತೆಗೆ ಶೀಘ್ರದಲ್ಲಿ ಸೌಲಭ್ಯ ದೊರಕುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.
ಬಳಿಕ ಹುನಗುಂದ ಪಟ್ಟಣದ ವಿದ್ಯಾನಗರದಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ನಿರ್ಮಾಣ ಹಂತದಲ್ಲಿರುವ ಮೂರು ನೂತನ ತರಗತಿ ಕೊಠಡಿಗಳ ಕಾಮಗಾರಿ ಹಾಗೂ Pಒ SಊಖI ಯೋಜನೆಯಡಿ ನಿರ್ಮಿಸಲಾಗುತ್ತಿರುವ ಗ್ರಂಥಾಲಯ ಕೊಠಡಿಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಅತ್ಯಂತ ಮುಖ್ಯವಾಗಿದ್ದು, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ತಿಳಿಸಿದರು.
ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಶೈಕ್ಷಣಿಕ ಚಟುವಟಿಕೆಗಳು, ಕಲಿಕಾ ವಾತಾವರಣ ಹಾಗೂ ಶಾಲೆಯಲ್ಲಿನ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮವನ್ನು ಪರಿಶೀಲಿಸಿದ ಅವರು, ಆಹಾರದ ಗುಣಮಟ್ಟ, ರುಚಿ ಹಾಗೂ ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಸ್ವತಃ ಬಿಸಿಯೂಟ ಸೇವಿಸಿ ಪರಿಶೀಲನೆ ನಡೆಸಿದರು. ಅಲ್ಲದೆ ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿ ಸ್ವಚ್ಛತೆ, ಗುಣಮಟ್ಟ ಹಾಗೂ ಪೌಷ್ಟಿಕಾಂಶದ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಾ ಸಿಬ್ಬಂದಿಗೆ ಸೂಚಿಸಿದರು.
ಅನಂತರ ಜಾಲಕಮಲದಿನ್ನಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ-೧ ಗೆ ಭೇಟಿ ನೀಡಿ, ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರ, ಆರೋಗ್ಯ ಸೇವೆಗಳು, ಪೂರ್ವ ಪ್ರಾಥಮಿಕ ಶಿಕ್ಷಣ ಚಟುವಟಿಕೆಗಳು ಹಾಗೂ ಹಾಜರಾತಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಮಕ್ಕಳ ಸಮಗ್ರ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮಕ್ಕಳಿಗೆ ಗುಣಮಟ್ಟದ ಸೇವೆಗಳನ್ನು ಒದಗಿಸಲು ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋಡಿಹಾಳ ಗ್ರಾಮದ ಜಲಶುದ್ಧೀಕರಣ ಘಟಕ (WಖಿP) ಕಾಮಗಾರಿಯನ್ನು ವೀಕ್ಷಿಸಿ, ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ತಾಂತ್ರಿಕ ಅಂಶಗಳು ಹಾಗೂ ನಿರ್ವಹಣಾ ವ್ಯವಸ್ಥೆಯ ಕುರಿತು ಮಾಹಿತಿ ಪಡೆದರು. ಗ್ರಾಮೀಣ ಜನತೆಗೆ ಸುರಕ್ಷಿತ ಹಾಗೂ ಶುದ್ಧ ಕುಡಿಯುವ ನೀರು ನಿರಂತರವಾಗಿ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.
ಪರಿಶೀಲನೆ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿ.ಪಂ ಸಿಇಓ ಗಜಾನನ ಬಾಳೆ ಅವರು, ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಗುಣಮಟ್ಟ, ಪಾರದರ್ಶಕತೆ ಹಾಗೂ ಸಮಯಪಾಲನೆಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದರು. ಸರ್ಕಾರದ ಯೋಜನೆಗಳ ಸೌಲಭ್ಯಗಳು ನೇರವಾಗಿ ಸಾರ್ವಜನಿಕರಿಗೆ ತಲುಪುವಂತೆ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು, ಇಂಜಿನಿಯರ್ಗಳು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
