ತಾಳಿಕೋಟೆ : ಪಟ್ಟಣದ ಸ್ವಚ್ಛತೆ, ನೈರ್ಮಲ್ಯ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಹಗಲು-ರಾತ್ರಿ ಎನ್ನದೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಪೌರಕಾರ್ಮಿಕರ ಸೇವೆಯನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶ್ರೀ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ಹೇಳಿದರು.
ಪಟ್ಟಣದ ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ದಿವ್ಯ ಸಾನಿದ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಪೌರಕಾರ್ಮಿಕರು ಪಟ್ಟಣದ ಸ್ವಚ್ಛತೆಯ ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರು ಆರೋಗ್ಯಕರ ವಾತಾವರಣದಲ್ಲಿ ಬದುಕಲು ಅವರ ಶ್ರಮವೇ ಪ್ರಮುಖ ಕಾರಣವಾಗಿದೆ. ಆದ್ದರಿಂದ ಅವರ ಸೇವೆಯನ್ನು ಗೌರವದಿಂದ ಕಾಣಬೇಕು ಎಂದರು.
ಪುರಸಭೆಯ ಮುಖ್ಯಾಧಿಕಾರಿ ಸುನೀಲ ಪಾಟೀಲ ಮಾತನಾಡಿ, ಪೌರಕಾರ್ಮಿಕರು ಪ್ರತಿನಿತ್ಯ ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುತ್ತಿದ್ದಾರೆ. ಪಟ್ಟಣವನ್ನು ಸ್ವಚ್ಛವಾಗಿ ಇಡುವ ಜವಾಬ್ದಾರಿ ಪೌರಕಾರ್ಮಿಕರದ್ದಷ್ಟೇ ಅಲ್ಲ, ಪ್ರತಿಯೊಬ್ಬ ನಾಗರಿಕರದ್ದಾಗಿದೆ. ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಪುರಸಭೆಯ ಸ್ವಚ್ಛತಾ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಪೌರಕಾರ್ಮಿಕರ ಕಾರ್ಯವನ್ನು ಗುರುತಿಸಿ ಅವರಿಗೆ ಗೌರವ ನೀಡುವ ಉದ್ದೇಶದಿಂದ ಪುರಸಭೆ ವತಿಯಿಂದ ವಿಶೇಷ ಸನ್ಮಾನ ಮಾಡಲಾಗಿದೆ ಪೌರಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪುರಸಭೆ ಕ್ರಮ ಕೈಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಚೇರಿ ವ್ಯವಸ್ಥಾಪಕ ಶಂಕರ್ ಇಂಜಗನೇರಿ, ಕಂದಾಯ ಅಧಿಕಾರಿ ಸುರೇಶ ಅಮರಣ್ಣನವರ, ಹಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ, ಶರಣಗೌಡ ಪೊಲೀಸ್‌ಪಾಟೀಲ, ಸಂದೀಪ ವಠಾರ, ಶಿವಾನಂದ ಜುಮನಾಳ, ರಂಗನಾಥ ಅಜಮನಿ, ಸಿದ್ದಲಿಂಗಯ್ಯ ಚೋಡಿಪಾಟೀಲ, ಶ್ರೀಪಾದ ಜೋಶಿ, ಶಂಕರಗೌಡ ಶಿವರಾಜ್, ಸಿದ್ದಪ್ಪ ಕೊಳ್ಳಿ ಸೇರಿದಂತೆ ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪೌರಕಾರ್ಮಿಕರು ತಮ್ಮ ಸೇವೆಯನ್ನು ಗುರುತಿಸಿ ಗೌರವಿಸಿದ ಪುರಸಭೆ ಅಧಿಕಾರಿಗಳು ಹಾಗೂ ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರು.