ಧಾರವಾಡ:25 : ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡುವ ಕುರಿತು ಚರ್ಚೆ ಮಾಡಲಾಗುತ್ತಿದ್ದು, ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಶೀಘ್ರದಲ್ಲೇ ಉದ್ಯೋಗ ಮೇಳ ಆಯೋಜಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹುಬ್ಬಳ್ಳಿ ಧಾರವಾಡ ನಗರಗಳು ಕೈಗಾರಿಕಾ ಮತ್ತು ವಿದ್ಯಾ ಕೇಂದ್ರಗಳಾಗಿವೆ. ಸಾಕಷ್ಟು ಕೈಗಾರಿಕೆಗಳು ಹುಬ್ಬಳ್ಳಿ ಧಾರವಾಡಗಳಲ್ಲಿವೆ. ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಬಹಳ ಮುಖ್ಯವಾಗಿದೆ. ಅರ್ಹ ಅಭ್ಯರ್ಥಿಗಳು ಕೆಲಸ ಸಿಗದೇ ನಿರಾಶರಾಗಬಾರದು. ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಬೇಕು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಕೈಗಾರಿಕೋದ್ಯಮಿಗಳ ಸಭೆ ಜರುಗಿಸಲಾಗುವುದು. ಕೈಗಾರಿಕೆಗಳಲ್ಲಿ ಅವಶ್ಯಕವಾಗಿರುವ ಕೌಶಲ್ಯಗಳನ್ನು ಅಭ್ಯರ್ಥಿಗಳಿಗೆ ತರಬೇತಿ ನೀಡಲು ಕ್ರಮ ವಹಿಸಬೇಕು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಹೊಸ ಅಭ್ಯರ್ಥಿಗಳಿಗೆ ಕೆಲಸಕ್ಕೆ ಅನುಸಾರವಾಗಿ ವೇತನ ನೀಡಬೇಕಿದೆ. ಅಲ್ಲದೇ ಅಲ್ಪಾವಧಿ ಮತ್ತು ದೀರ್ಘಾವಧಿಯ ಕೆಲಸದ ಬಗ್ಗೆ ಮಾಹಿತಿ ಒದಗಿಸಬೇಕು. ಐಟಿಐ ವಿದ್ಯಾರ್ಹತೆ ಹೊಂದಿದವರಿಗೆ ಸಾಕಷ್ಟು ಉದ್ಯೋಗಾವಕಾಶಗಳು ದೊರೆಯುತ್ತಿವೆ. ಪದವೀಧರರಿಗೂ ಸಹ ಉದ್ಯೋಗಗಳು ದೊರೆಯುವಂತಾಗಬೇಕು. ಫ್ಯೂಚರ್ ಸ್ಕಿಲ್ ಯೋಜನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಬೇಕಿದೆ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಂತೆ ಕೌಶಲ್ಯ ತರಬೇತಿ ಮತ್ತು ಯೋಜನೆಗಳ ಸಾಧನೆಯ ವರದಿಯನ್ನು ನೀಡಬೇಕು. ಪಾರಂಪರಿಕ ಮತ್ತು ಪ್ರಾದೇಶಿಕ ಕಲೆಗಳು ನಶಿಸಿ ಹೋಗದಂತೆ ಕ್ರಮ ವಹಿಸಬೇಕು. ನನ್ನ ವೃತ್ತಿ ನನ್ನ ಆಯ್ಕೆ ಹಾಗೂ ಕಲಿಕೆಯೊಂದಿಗೆ ಕೌಶಲ್ಯ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ನಲ್ ಜಲ್ ಮಿತ್ರ ಯೋಜನೆಯಡಿ ತರಬೇತಿ ಪಡೆದವರು ಸ್ವಾವಲಂಬಿ ಜೀವನ ನಡೆಸುವಂತಾಗಬೇಕಿದೆ ಎಂದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ಉದ್ಯೋಗ ಆಧಾರಿತ ತರಬೇತಿ ನೀಡುವುದು ಅಗತ್ಯವಿದೆ. ಆ ನಿಟ್ಟಿನಲ್ಲಿ ತರಬೇತಿ ಜೊತೆಗೆ ಗೌರವ ಸಂಭಾವನೆ ನೀಡಬೇಕಿದೆ. ಧಾರವಾಡದಲ್ಲಿ ಸಾಕಷ್ಟು ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿದ್ದಾರೆ. ನವಲಗುಂದದ ಅಭಿಯಾನ ಫೌಂಡೇಶನ್ ಯೋಗ ಮ್ಯಾಟ್ ತಯಾರಿ ಕುರಿತು ತರಬೇತಿ ನೀಡಲು ಮುಂದಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ನಲ್ ಜಲ್ ಮಿತ್ರ ಯೋಜನೆಯಡಿ ತರಬೇತಿ ಪಡೆದ ಶಿಭಿರಾರ್ಥಿಗಳಿಗೆ ಪ್ರಮಾಣಪತ್ರ, ಟೂಲ್ ಕಿಟ್ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ದ್ಯಾಬೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಇತರರು ಭಾಗವಹಿಸಿದ್ದರು.