ಬಾಗಲಕೋಟೆ : ಸೆಪ್ಟೆಂಬರ ೨೧ : ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಸಭಾಂಗಣದಲ್ಲಿಂದು ಜಮಖಂಡಿ ತಾಲೂಕಿನ ಕೊಣ್ಣೂರು ಗ್ರಾಮದ ಮೂಲಸೌಕರ್ಯ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿ.ಪಂ ಸಿಇಒ ಗಜಾನನ ಬಾಲೆ ಅವರ ಜಂಟಿ ಅಧ್ಯಕ್ಷತೆಯಲ್ಲಿ ರವಿವಾರ ಮಹತ್ವದ ಸಭೆ ನಡೆಯಿತು.
ಕೊಣ್ಣೂರು ಗ್ರಾಮದ ಮಡ್ಡಿ ಪ್ಲಾಟ್‌ನಲ್ಲಿ ವಾಸಿಸುತ್ತಿರುವ ಬಡ ನಿವಾಸಿಗಳಿಗೆ ಶಾಶ್ವತ ಹಕ್ಕುಪತ್ರ ನೀಡುವ ಸಂಬಂಧ ಈಗಾಗಲೇ ಗ್ರಾಮಸಭೆ ನಡೆಸಲಾಗಿದ್ದು, ಮುಂಬರುವ ಗ್ರಾಮಸಭೆಗಳಲ್ಲಿ ಅರ್ಹ ಫಲಾನುಭವಿಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ, ಶೀಘ್ರವಾಗಿ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲು ಸಂಬಂದಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಸಭೆಯಲ್ಲಿ ಕೊಣ್ಣೂರು ಗ್ರಾಮದ ಪ್ರಮುಖ ಸಮಸ್ಯೆಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು. ಕೊಣ್ಣೂರು ಗ್ರಾಮದ ಪ್ರಮುಖ ಆರು ರಸ್ತೆಗಳನ್ನು ಡಾಂಬರೀಕರಣಗೊಳಿಸಲು ಅಗತ್ಯ ಅನುದಾನ ಕೋರಿ, ಅಂದಾಜು ಪತ್ರಿಕೆಯೊಂದಿಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಶೀಘ್ರ ಅನುಮೋದನೆ ಹಾಗೂ ಅನುದಾನ ಬಿಡುಗಡೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.
ಕೊಣ್ಣೂರು ಗ್ರಾಮಕ್ಕೆ ಮಂಜೂರಾಗಿದ್ದ ಪದವಿ ಪೂರ್ವ ಕಾಲೇಜನ್ನು ಬೇರೆಡೆಗೆ ವರ್ಗಾಯಿಸಿರುವ ವಿಷಯವೂ ಸಭೆಯಲ್ಲಿ ಚರ್ಚಿಸಲಾಗಿ, ಈ ಪ್ರಸ್ತಾವನೆ ಪ್ರಸ್ತುತ ಸರ್ಕಾರದ ಹಂತದಲ್ಲಿದ್ದು, ಅಗತ್ಯ ಕ್ರಮಕ್ಕಾಗಿ ಪರಿಶೀಲಿಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಕೊಣ್ಣೂರು ಗ್ರಾಮದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ತಹಶೀಲ್ದಾರ ವಾಸುದೇವ ಸ್ವಾಮಿ, ಪಂಚಾಯತ ರಾಜ್ ಇಲಾಖೆಯ ಮುಖ್ಯ ಇಂಜಿನೀಯರ್ ಆಕಾಶ ವಂದೆ, ತಾಪಂ ಇಒ ಬಡಿಗೇರ ಸೇರಿದಂತೆ ಇತರರೆ ಅಧಿಕಾರಿಗಳು ಉಪಸ್ಥಿತರಿದ್ದರು.