ಬಾಗಲಕೋಟೆ: ಜುಲೈ ೨೯ : ಜಿಲ್ಲೆಯಲ್ಲಿ ಆಗಸ್ಟ ೧೫ ರಂದು ಜರುಗಲಿರುವ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ, ಶಿಸ್ತು ಹಾಗೂ ದೇಶಭಕ್ತಿಯ ಭಾವನೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಸಂಗಪ್ಪ ಅವರು ಕರೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸ್ವಾತಂತ್ರೋತವ ದಿನಾಚರಣೆ ಕುರಿತ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮದ ರೂಪುರೇಷೆ, ವಿವಿಧ ಇಲಾಖೆಗಳ ಜವಾಬ್ದಾರಿಗಳು ಹಾಗೂ ಅಗತ್ಯ ಸಿದ್ದತೆಗಳ ಕುರಿತು ಸವಿಸ್ತಾವಾಗಿ ಚರ್ಚಿಸಿದರು. ಯಾವುದೇ ರೀತಿಯ ಲೋಪವಾಗದಂತೆ ಎಲ್ಲ ರೀತಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ಧ್ವಜ ಅಂಗಡಿಗಳಲ್ಲಿ ಮಾರಾಟವಾಗದಂತೆ ನಗರಸಭೆ ನಿಗಾವಹಿಸಲು ತಿಳಿಸಿದ ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಿದರು.
ಆಗಸ್ಟ ೧೫ ರಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಜಹಣ ನೆರವೇರಲಿದ್ದು, ಪೋಲಿಸ್, ಗೃಹರಕ್ಷಕದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮಾಜಿ ಸೈನಿಕರ ತಂಡ ಒಳಗೊಂಡಂತೆ ಆಕರ್ಷಕ ಪಥಸಂಚಲನ ಹಮ್ಮಿಕೊಳ್ಳಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಮಾಜಿ ಸೈನಿಕರಿಗೆ, ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ದೇಶಭಕ್ತಿ ಗೀತೆ ಹಾಡಿಸಲು ತಂಡಗಳನ್ನು ಆಯ್ಕೆ ಮಾಡಲು ತಿಳಿಸಿದರು.
ಕಾರ್ಯಕ್ರಮ ಯಶಸ್ವಿಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ ವಹಿಸಿದ ಜವಾಬ್ದಾರಿಯನ್ನು ತಪ್ಪದೇ ಪಾಲಿಸಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಲು ಸೂಚಿಸಿದ ಅವರು ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೋಲಿಸ್ ಇಲಾಖೆ, ತಹಶೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಿದರೆ, ಬಂದೂಬಸ್ತಿ ವ್ಯವಸ್ಥೆಗೆ ಪೋಲಿಸ್ ಇಲಾಖೆಗೆ ತಿಳಿಸಲಾಯಿತು. ಜಿಲ್ಲಾ ಕ್ರೀಡಾಂಗಣ ಸ್ವಚ್ಛತೆಗೆ ನಗರಸಭೆಗೆ ಸೂಚಿಸಲಾಯಿತು.
ಕ್ರೀಡಾಂಗಣದಲ್ಲಿ ಸ್ಟೇಜ್ ನಿರ್ಮಾಣ, ಗಣ್ಯರಿಗೆ, ಶಾಸಕರಿಗೆ, ಸಂಸದರುಗಳಿಗೆ ಹಾಗೂ ಸನ್ಮಾನಿತರಿಗೆ, ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆ ಕೈಗೊಳ್ಳಲು ಸೂಚಿಸಿದರು. ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಮಕ್ಕಳಿಗೆ ಸಹಿ ವಿತರಣೆಗೆ ಕ್ರಮವಹಿಸಬೇಕು. ಜಿಲ್ಲಾಡಳಿತ ಭವನ ಸೇರಿದಂತೆ ತಾಲೂಕ ಆಡಳಿತ ಭವನ, ಜಿಲ್ಲಾ ಕ್ರೀಡಾಂಗಣಕ್ಕೂ ವಿದ್ಯುತ್ ಅಲಂಕಾರ ಮಾಡುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಜಗದೀಶ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಜೀತ್ ಮನ್ನಿಕೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶ ಪುಂಡಲೀಕ ಕಾಂಬಳೆ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರಪಾದ ಡೂಗನವರ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.