ಹಸಿರು ಕ್ರಾಂತಿ ವರದಿ ಬೆಳಗಾವಿ
ಗ್ರಾಮೀಣ ಪ್ರದೇಶದಲ್ಲಿಯೇ ಹೆಚ್ಚು ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಸೂಕ್ತ ವೇದಿಕೆ ಕಲ್ಪಿಸಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಕ್ರೀಡಾಕೂಟವನ್ನು ರಾಜ್ಯ ಸರ್ಕಾರ ಆಯೋಜಿಸಿದೆ ಎಂದು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಲೂಕು ಅನುಷ್ಠಾನ ಅಧಿಕಾರಿ ಸಂಜಯಕುಮಾರ ನಾಯಕ ಹೇಳಿದರು.
ನಿಪ್ಪಾಣಿಯ ನಾಗನೂರು ಶಂಕರ್ ಜೊಲ್ಲೆ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶನಿವಾರ ನಡೆದ 2026-27ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಗೆ ಉತ್ತೇಜನ ನೀಡುತ್ತಿದ್ದು, ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಇದರ ಸದುಪಯೋಗವನ್ನು ಹೆಚ್ಚು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಶಿವಶಂಕರ್ ಜೊಲ್ಲೆ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲರಾದ ಡಾ.ಉರ್ಮಿಲಾ ಚೌಗುಲೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವಿಧ ಶಾಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿದ್ದು, ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ಗಣ್ಯರು ಧ್ವಜಾರೋಹಣ ನೆರವೇರಿಸಿ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ರಾಷ್ಟ್ರಗೀತೆ ಹಾಡಿದರು. ದೇಶಭಕ್ತಿ, ಶಿಸ್ತು ಮತ್ತು ಕ್ರೀಡಾ ಸ್ಫೂರ್ತಿಯಿಂದ ಇಡೀ ಮೈದಾನವು ಉತ್ಸಾಹಭರಿತ ವಾತಾವರಣದಿಂದ ಕಂಗೊಳಿಸಿತು. ಮೈದಾನದಲ್ಲಿ ಅತ್ಯಂತ ಉತ್ಸಾಹ ಹಾಗೂ ಕ್ರೀಡಾ ಸ್ಫೂರ್ತಿಯಿಂದ ಜರುಗಿತು.
ಈ ಸಂದರ್ಭದಲ್ಲಿ ಛತ್ರಪತಿ ಶಿವಾಜಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರಾಕೇಶ್ ಶರ್ಮಾ, ಎಲ್.ಬಿ.ಭಂಡಗರ್, ಸುನೀಲ್ ಸಾನೆ, ಎ.ವಿ.ಮಾಳಗತ್ತೆ ಹಾಗೂ ಜಡ್ಡಾರ್ ಮುಲ್ಲಾ ಸೇರಿದಂತೆ ವಿವಿಧ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ಮಹಾದೇವಿ ಸಟಾಲೆ ನಿರೂಪಿಸಿದರು.
ಕ್ರೀಡಾಕೂಟವು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ತಂಡಭಾವನೆ, ಕ್ರೀಡಾ ಮನೋಭಾವ ಹಾಗೂ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.
-ಸಂಜಯಕುಮಾರ ನಾಯಕ, ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಲೂಕು ಅನುಷ್ಠಾನ ಅಧಿಕಾರಿ.