ಕೊಪ್ಪಳ ಜೂನ್ 18: ಎಸ್‌ಬಿಐ ಆರ್‌ಸೆಟ್‌ಇ ಸಂಸ್ಥೆಯಲ್ಲಿ ತರಬೇತಿ ಪೂರ್ಣಗೊಳಿಸಿದ ಅರ್ಹ ಫಲಾನುಭವಿಗಳಿಗೆ ಸ್ವ-ಉದ್ಯೋಗ ಪ್ರಾರಂಭಿಸಲು ಅಗತ್ಯ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಮಿತಿ ಸಭಾಂಗಣದಲ್ಲಿ ಬುಧವಾರ (ಜೂ. 17ರಂದು) ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ ಬೇರೆ-ಬೇರೆ ಯೋಜನೆಗಳಡಿ ಹೊಸ ತರಬೇತಿ ಕಾರ್ಯಾಗಾರಗಳನ್ನು ಆರ್‌ಸೆಟ್‌ಇ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲು ಕ್ರಮ ವಹಿಸಿ. ನಮ್ಮ ಜಿಲ್ಲೆಯ ಅವಶ್ಯಕತೆ ಹಾಗೂ ಸಾರ್ವಜನಿಕರ ಆಸಕ್ತಿಗೆ ಅನುಗುಣವಾಗಿ ತರಬೇತಿ ವಿಷಯಗಳನ್ನು ಆಯ್ಕೆ ಮಾಡಿಕೊಂಡು ತರಬೇತಿಯನ್ನು ನೀಡಬೇಕು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿದ ನಿರುದ್ಯೋಗಿ ಅಭ್ಯರ್ಥಿಗಳ ಪಟ್ಟಿ ಪಡೆದು, ಅಭ್ಯರ್ಥಿಗಳನ್ನು ಸಂಪರ್ಕಿಸಿ ಅವರಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತರಬೇತಿ ನೀಡಿ, ಸ್ವಯಂ ಉದ್ಯೋಗ ಕೈಗೊಳ್ಳಲು ಸಂಸ್ಥೆ ಹಾಗೂ ಲೀಡ್ ಬ್ಯಾಂಕ್ ನಿಂದ ಅಗತ್ಯ ಅನುಕೂಲ ಮಾಡಿಕೊಡಬೇಕು. ಇದರ ಜೊತೆ ವಿವಿಧ ಇಲಾಖೆಗಳ ಮೂಲಕ ದೊರೆಯುವ ಸಹಾಯಧನ, ಸಾಲ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಬೇಕು ಎಂದರು.
ತರಬೇತಿ ಸಂಸ್ಥೆಯಲ್ಲಿ ಕೌಶಲ್ಯಾಧಾರಿತ ವೃತ್ತಿಗಳು ಮಾತ್ರವಲ್ಲದೆ, ಯುವಕರಿಗೆ ಹೆಚ್ಚಿನ ಆಸಕ್ತಿ ಇರುವಂತಹ ಎಲೆಕ್ಟ್ರೀಕಲ್, ಟೆಕ್ಸ್ಟೈಲ್ಸ್, ಜೇನು ಸಾಕಾಣಿಕೆ, ಕುರಿ ಸಾಕಾಣಿಕೆ, ತೋಟಗಾರಿಕೆ ಬೆಳೆಗಳ ಪದ್ಧತಿ, ಮೀನುಗಾರಿಕೆ, ಹೈನುಗಾರಿಕೆ, ಕಂಪ್ಯೂಟರ್ ತರಬೇತಿ ಹೀಗೆ ಹೊಸ, ಹೊಸ ವಿಷಯಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿಯನ್ನು ನೀಡಬೇಕು. ತರಬೇತಿ ಕೇಂದ್ರದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ. ಅಭ್ಯರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಕೊಪ್ಪಳ ಲೀಡ್ ಬ್ಯಾಂಕ್‌ನ ವ್ಯವಸ್ಥಾಪಕರಾದ ಮಾರುತಿ ಕೆ., ಆರ್‌ಸೆಟಿ ನಿರ್ದೇಶಕರಾದ ರಾಯೇಶ್ವರ ಪೈ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ತಾರಕೇಶ್ವರ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗಾಧಿಕಾರಿ ವಿರೇಶ್, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕರಾದ ಮಹಾದೇವ ಕೀರ್ತಿ ಸೇರಿದಂತೆ ಎಸ್‌ಬಿಐ ಆರ್‌ಸೆಟ್‌ಇ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
****
