ಚನ್ನಮ್ಮನ ಕಿತ್ತೂರು:ತಾಲ್ಲೂಕಿನ ಗುಡಿಕೊಟಬಾಗಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ವತಿಯಿಂದ ನಿರ್ಮಿಸಲಾಗಿರುವ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನವೆಂಬರ ಇಂದು (20ರಂದು) ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.
ಗ್ರಾಮೀಣ ಭಾಗದ ರೈತರು, ಕೃಷಿಕರು ಹಾಗೂ ಸಾರ್ವಜನಿಕರಿಗೆ ಸಹಕಾರಿ ಕ್ಷೇತ್ರದ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಮತ್ತು ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಸಂಘದ ವತಿಯಿಂದ ಈ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಸಂಘದ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಸದಸ್ಯರಿಗೆ ಉತ್ತಮ ಸೇವೆ ಒದಗಿಸುವುದು ಕಟ್ಟಡ ನಿರ್ಮಾಣದ ಪ್ರಮುಖ ಉದ್ದೇಶವಾಗಿದೆ.
ಗ್ರಾಮೀಣ ಪ್ರದೇಶದ ಆರ್ಥಿಕ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಸಹಕಾರಿ ಸಂಘಗಳು ಮಹತ್ವದ ಪಾತ್ರ ವಹಿಸುತ್ತಿವೆ. ರೈತರಿಗೆ ಅಗತ್ಯವಿರುವ ಆರ್ಥಿಕ ಸೌಲಭ್ಯಗಳು, ಸಹಕಾರಿ ಸೇವೆಗಳು ಹಾಗೂ ವಿವಿಧ ವ್ಯವಹಾರಗಳನ್ನು ಸ್ಥಳೀಯವಾಗಿಯೇ ಒದಗಿಸುವಲ್ಲಿ ಇಂತಹ ಸಂಘಗಳ ಕೊಡುಗೆ ಅಪಾರವಾಗಿದೆ. ಈ ಹಿನ್ನೆಲೆಯಲ್ಲಿ ಗುಡಿಕೊಬಾಗಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡವು ಸಂಘದ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬುವ ನಿರೀಕ್ಷೆಯಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಸಂಘದ ಅಧ್ಯಕ್ಷ ನಿಜಲಿಂಗಯ್ಯ ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ನೂತನ ಕಟ್ಟಡವನ್ನು ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ನಾನಾಸಾಹೇಬ ಪಾಟೀಲ ಹಾಗೂ ಮಹಾಂತೇಶ ದೊಡ್ಡಗೌಡರ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಬಾಬಾಸಾಹೇಬ ಪಾಟೀಲ ಹಾಗೂ ಮಾಜಿ ಶಾಸಕ ಸುರೇಶ ಮಾರಿಹಾಳ ಆಗಮಿಸಲಿದ್ದಾರೆ. ತಾಲ್ಲೂಕು ನಿಯಂತ್ರಣ ಅಧಿಕಾರಿ ಶಿವಾನಂದ ಕೋಟಿ ಹಾಗೂ ಶಿವರಾಮ ಬಸ್ಸಿದೊಣಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಗ್ರಾಮದ ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲಾಗಿರುವ ಈ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ರೈತರು, ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.