ವಿಜಯಪುರ,ಸೆ.೧೯: ಕೃಷಿ, ತೋಟಗಾರಿಕೆ ಹಾಗೂ ಪರಿಸರ ಸಂರಕ್ಷಣೆ ಕ್ಷೇತ್ರಗಳಲ್ಲಿ ಜಿಲ್ಲೆ ಗಮನಾರ್ಹ ಸಾಧನೆ ಮಾಡುತ್ತಿದ್ದು, ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಡೆಗೆ ಸಾಗುತ್ತಿದೆ ಎಂದು ಪ್ರಾಚಾರ್ಯ ಜೆ.ಎಸ್. ಹಿರೇಮಠ ಹೇಳಿದರು.
ನಗರದ ಅಫಜಲಪುರ ಟಕ್ಕೆಯಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತ ಪರಿಚಯಾತ್ಮಕ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಕೋಟಿವೃಕ್ಷ ಅಭಿಯಾನದಿಂದ ಅರಣ್ಯ ಪ್ರದೇಶದ ಪ್ರಮಾಣ ಶೇ.೦.೧೭ರಿಂದ ಶೇ.೨.೪ಕ್ಕೆ ಏರಿಕೆಯಾಗಿದೆ ಎಂದು ಅವರು ತಿಳಿಸಿದರು.
ಜಗತ್ಪ್ರಸಿದ್ಧ ಗೋಲಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ಆದಿಲ್‌ಶಾಹಿ ಕಾಲದ ಐತಿಹಾಸಿಕ ಸ್ಮಾರಕಗಳು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಪ್ರವಾಸೋದ್ಯಮದ ಮೂಲಕ ಸ್ಥಳೀಯ ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ವಿಪುಲ ಅವಕಾಶ ಒದಗಿವೆ ಎಂದು ಹೇಳಿದರು.
ತರಬೇತಿ ಬೋಧಕರಾದ ವಿ.ವಿ. ಕಮಲಾಪೂರ ಹಾಗೂ ಎಸ್.ಆರ್. ಹೀರೇಮಠ ಮಾತನಾಡಿದರು. ಜಿಲ್ಲಾ ತರಬೇತಿ ಸಂಸ್ಥೆಯ ಅವರು ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ತರಬೇತಿ ನೀಡಿದರು.
ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ ಕರ್ನಾಟಕ ಕೇಂದ್ರದ ಸಂಯೋಜಕ ಡಾ. ಸಿದ್ದರಾಮ ಹೆಚ್.ಎಂ. ಅವರು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಾಗಾರದಲಿ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾಧಿಕಾರಿ ವ್ಯಾಪ್ತಿಯ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ತರಬೇತಿಯಲ್ಲಿ ಪಾಲ್ಗೊಂಡಿದ್ದರು.