ಬಳ್ಳಾರಿ18:.: ಉಪ ಮುಖ್ಯಮಂತ್ರಿ D. K. Shivakumar ಅವರ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನೇರಪಾವತಿ ಪೌರ ಕಾರ್ಮಿಕರಿಗೆ ಆರೋಗ್ಯ ವಿಮೆ ಕಾರ್ಡ್‌ಗಳನ್ನು ವಿತರಿಸಲಾಯಿತು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ನೂರಾರು ಪೌರ ಕಾರ್ಮಿಕರಿಗೆ ಆರೋಗ್ಯ ಭದ್ರತೆ ಕಲ್ಪಿಸುವ ಉದ್ದೇಶದಿಂದ ವಿಮೆ ಕಾರ್ಡ್‌ಗಳನ್ನು ವಿತರಿಸಲಾಯಿತು. ಕಾರ್ಮಿಕರು ಆರೋಗ್ಯ ಸಮಸ್ಯೆ ಎದುರಿಸಿದ ಸಂದರ್ಭದಲ್ಲಿ ಗುಣಮಟ್ಟದ ಚಿಕಿತ್ಸೆ ಸುಲಭವಾಗಿ ದೊರೆಯುವಂತೆ ಈ ಯೋಜನೆ ಸಹಕಾರಿಯಾಗಲಿದೆ ಎಂದು ಗಣ್ಯರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹಾನಗರ ಪಾಲಿಕೆ ಮೇಯರ್ ಪಿ. ಗಾದಪ್ಪ, ‘ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದು. ಮಳೆ, ಬಿಸಿಲು ಎನ್ನದೆ ಜನಸೇವೆಯಲ್ಲಿ ತೊಡಗಿರುವ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆರೋಗ್ಯ ವಿಮೆ ಸೌಲಭ್ಯವು ಅವರ ಕುಟುಂಬಕ್ಕೂ ನೆರವಾಗಲಿದೆ’ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಮಾತನಾಡಿ, ‘ಪೌರ ಕಾರ್ಮಿಕರ ಜೀವನಮಟ್ಟ ಸುಧಾರಣೆಗೆ ಸರ್ಕಾರ ಬದ್ಧವಾಗಿದೆ. ಆರೋಗ್ಯ, ಶಿಕ್ಷಣ ಹಾಗೂ ವಸತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ’ ಎಂದು ತಿಳಿಸಿದರು.
ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಮಾತನಾಡಿ, ಆರೋಗ್ಯ ವಿಮೆ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬ ಪೌರ ಕಾರ್ಮಿಕರು ಪಡೆದುಕೊಳ್ಳಬೇಕು. ತುರ್ತು ಆರೋಗ್ಯ ಸೇವೆ ಸಂದರ್ಭದಲ್ಲಿ ಈ ಕಾರ್ಡ್‌ಗಳು ಆರ್ಥಿಕ ನೆರವಾಗಲಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
