ಬಳ್ಳಾರಿ, ಜೂ. 25:: ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಂಪ್ಲಿ ಕ್ಷೇತ್ರದ ಸಾವಿರಾರು ಮತದಾರರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬುಧವಾರ ಬಳ್ಳಾರಿ ನಗರದಲ್ಲಿ ಬೃಹತ್ ಪಾದಯಾತ್ರೆ ಮತ್ತು ಮೆರವಣಿಗೆ ನಡೆಸಿದರು.
ನಗರದ ಹೊಸಪೇಟೆ ರಸ್ತೆಯ ಏಳುಮಕ್ಕಳ ತಾಯಮ್ಮ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯಲ್ಲಿ ಕಂಪ್ಲಿ ಹಾಗೂ ಕುರುಗೋಡು ಭಾಗಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು. ಮೆರವಣಿಗೆಯು ಗವಿಯಪ್ಪ ವೃತ್ತ, ಗಡಗಿ ಚನ್ನಪ್ಪ ವೃತ್ತ ಮಾರ್ಗವಾಗಿ ಸಾಗಿದು ಬಳಿಕ ಬಿ.ಡಿ.ಎ.ಎ. ಸಭಾಂಗಣಕ್ಕೆ ತಲುಪಿತು. ಅಲ್ಲಿ ನಡೆದ ಸಭೆಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಶಾಸಕ ಗಣೇಶ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಜೆ.ಎನ್. ಗಣೇಶ್ ಅವರು ಎರಡು ಬಾರಿ ಕಂಪ್ಲಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಕರ್ನಾಟಕ ಜವಳಿ ಮತ್ತು ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೇತ್ರದ ರಸ್ತೆ, ಕುಡಿಯುವ ನೀರು, ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಜನನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ರೈತರ ಪರ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಗಣೇಶ್ ಅವರು ಕೃಷಿ ಸಮಸ್ಯೆಗಳ ಪರಿಹಾರ, ನೀರಾವರಿ ಸೌಲಭ್ಯಗಳ ವಿಸ್ತರಣೆ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳನ್ನು ವಿಧಾನಸಭೆಯಲ್ಲಿ ಪ್ರಬಲವಾಗಿ ಪ್ರಸ್ತಾಪಿಸಿದ್ದಾರೆ. ಸಂಕಷ್ಟದ ಸಂದರ್ಭಗಳಲ್ಲಿ ರೈತರ ಪರವಾಗಿ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿಗಾಗಿ ಶ್ರಮವಹಿಸಿದ್ದು, ಪಕ್ಷ ಸಂಘಟನೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಅಖಂಡ ಬಳ್ಳಾರಿ ಜಿಲ್ಲೆಯ ಜನಪ್ರಿಯ ಯುವ ನಾಯಕರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ನೀಡಿದರೆ ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದ್ದು, ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಪರಿಣಾಮಕಾರಿ ಆಡಳಿತ ಸಾಧ್ಯವಾಗಲಿದೆ. ಜೊತೆಗೆ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಪಡಿಸಲು ಹಾಗೂ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯ ವ್ಯಕ್ತಪಡಿಸಿದರು.