ಬಳ್ಳಾರಿ, ಮೇ 06..: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕಳೆದ 112 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸುತ್ತಿದೆ ಎಂದು ಸನ್ಮಾರ್ಗ ಗೆಳೆಯರ ಬಳಗದ ಅಧ್ಯಕ್ಷ ಹೆಚ್. ಲಕ್ಷ್ಮಿಕಾಂತ ರೆಡ್ಡಿ ಹೇಳಿದರು.
ನಗರದ ಸನ್ಮಾರ್ಗ ಗೆಳೆಯರ ಬಳಗದ ಸಭಾಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ 112ನೇ ವರ್ಷದ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಜೀವಂತವಾಗಿಡುವಲ್ಲಿ ಪರಿಷತ್ತಿನ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕುರುಗೋಡು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ತಿಪ್ಪೇರುದ್ರ ಸಂಡೂರು ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಾಧನೆಯ ಹೆಜ್ಜೆಗಳು ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ಶಿವಲಿಂಗಪ್ಪ ಹಂದಿಹಾಳು ಮಾತನಾಡಿ, ಬಳ್ಳಾರಿ ಜಿಲ್ಲೆಗೆ 69 ವರ್ಷಗಳ ಬಳಿಕ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಲಭಿಸಿದ್ದು, ಕಾನೂನು ತೊಡಕುಗಳಿಂದಾಗಿ ಅದು ವಿಳಂಬವಾಗುತ್ತಿದೆ. ಶೀಘ್ರದಲ್ಲೇ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸಲು ರಾಜ್ಯ ಕಾರ್ಯಕಾರಿ ಸಮಿತಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಕಥೆಗಾರ ವೀರೇಂದ್ರ ರಾವಿಹಾಳ್ ಹಾಗೂ ಚಿತ್ರ ಕಲಾವಿದ ಮಂಜುನಾಥ ಗೋವಿಂದವಾಡ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ಲಲಿತ ಕಲಾ ಅಕಾಡೆಮಿ ವರ್ಣಶ್ರೀ ಪ್ರಶಸ್ತಿ ಪುರಸ್ಕೃತರಾದ ಚಿತ್ರಕಲಾವಿದ ಎಂ. ರಫೀ, ಆಲಾಪ್ ಸಂಗೀತ ಕಲಾ ಟ್ರಸ್ಟ್ ಅಧ್ಯಕ್ಷ ಬಿ. ರಮಣಪ್ಪ ಹಾಗೂ ವಂದನಾ ಶಾಲೆಯ ಅಧ್ಯಕ್ಷ ಕೆ.ಬಿ. ಈಶ್ವರ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಶಿಕ್ಷಕ ಹರಿಪ್ರಸಾದ್ ನಿರೂಪಿಸಿದರು. ಸಂಚಾಲಕ ಕಪ್ಪಗಲ್ಲು ಚಂದ್ರಶೇಖರ್ ಆಚಾರ್ ಸ್ವಾಗತಿಸಿ ವಂದನಾರ್ಪಣೆ ಸಲ್ಲಿಸಿದರು.
