ಬೆಳಗಾವಿ: ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಆಶಯದಂತೆ ಹೂಗಾರ ಸಮುದಾಯವು ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಸದೃಢವಾಗಬೇಕು. ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಭಾನುವಾರ ಜಿಲ್ಲಾ ಹೂಗಾರ, ಪೂಜಾರ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಸವಾದಿ ಶರಣರ ಕಾಲದಿಂದಲೂ ಹೂಗಾರ ಸಮುದಾಯ ಕಾಯಕದಲ್ಲಿ ತೊಡಗಿಸಿಕೊಂಡು ಬಂದಿದೆ. ‘ಕಾಯಕವೇ ಕೈಲಾಸ’ ಎಂಬ ತತ್ವವೇ ಸಮುದಾಯದ ಮೂಲ ಆಶಯವಾಗಿದೆ. ಸಮಾಜದಲ್ಲಿ ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶಗಳು ದೊರೆಯದಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಬಲಿಷ್ಠರಾಗುವ ಅಗತ್ಯವಿದೆ ಎಂದರು.
ಜಾತಿ ವ್ಯವಸ್ಥೆಯಿಂದ ಸಮಾಜವು ಹಲವು ಭಾಗಗಳಾಗಿ ವಿಭಜನೆಯಾಗಿದೆ. ಬಸವಾದಿ ಶರಣರು ತಮ್ಮ ಕ್ರಾಂತಿಕಾರಿ ವಿಚಾರಗಳು ಹಾಗೂ ಆದರ್ಶಗಳ ಮೂಲಕ ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದರು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮುದಾಯದ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಸಾಗಬೇಕು ಎಂದು ಹೇಳಿದರು.
ಜಯಂತಿ ಆಚರಣೆ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ, ಸಮುದಾಯದ ಅಭಿವೃದ್ಧಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ನಿರಂತರ ಪ್ರೇರಣೆಯಾಗಬೇಕು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು, ಯುವಜನರನ್ನು ಶಿಕ್ಷಣದ ಮೂಲಕ ಬೆಳೆಸುವುದು ಸೇರಿದಂತೆ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಬೇಕು. ಸಮುದಾಯದ ಅಭಿವೃದ್ಧಿಗೆ ತಮ್ಮ ಬೆಂಬಲ ಮುಂದುವರಿಯಲಿದೆ ಎಂದು ಸತೀಶ ಜಾರಕಿಹೊಳಿ ಭರವಸೆ ನೀಡಿದರು.
ಜಿಲ್ಲಾಧ್ಯಕ್ಷರಾದ ಶಿವಾನಂದ ಹೂಗಾರ ಮಾತನಾಡಿ, ನಿತ್ಯವೂ ಕಾಯಕದಲ್ಲಿ ತೊಡಗಿರುವ ಶಿವಶರಣ ಹೂಗಾರ ಸಮುದಾಯ ಬಹಳಷ್ಟು ಹಿಂದುಳಿದಿದೆ. ಹೀಗಾಗಿ ನಾವು ಆರ್ಥಿಕವಾಗಿ ಸದೃಢವಾಗಲು ಸರ್ಕಾರ ಸಮುದಾಯಕ್ಕೆ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಕಾಗವಾಡ ಶ್ರೀ ಗುರುದೇವಾಶ್ರಮದ ಪರಮಪೂಜ್ಯ ಶ್ರೀ ಯತೀಶ್ವರಾನಂದ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್, ಶಾಸಕ ದುರ್ಯೋಧನ ಐಹೊಳೆ, ಮಾಜಿ ಶಾಸಕ ಅನಿಲ ಬೆನಕೆ, ವಿಶ್ವನಾಥ ಪಾಟೀಲ, ಮಹಾದೇವ ಗುರವ್, ಗೀತಾ ಸುತಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.