Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣದೊಂದಿಗೆ ಕೌಶಲ್ಯ ಕರಗತ ಮಾಡಿಕೊಳ್ಳಿ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅಭಿಮತ

ಅಕ್ಕನ ವಿವಿಯ ದಶಮಾನೋತ್ಸವ ಕಟ್ಟಡ, ಸಂಸ್ಥಾಪನಾ ದಿನಾಚರಣೆ

ವಿಜಯಪುರ, ಜು.೩೦:  ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ  ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರು ಶಿಕ್ಷಣವಂತರಾಗುವುದರ ಜೊತೆಗೆ ವಿವಿಧ ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಅವರು ಹೇಳಿದರು. ನಗರದ ಹೊರವಲಯದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನೂತನವಾಗಿ ನಿರ್ಮಿಸಲಾದ ದಶಮಾನೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಮನಸ್ಸು ಮಾಡಿದರೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಲು ಸಾಧ್ಯ . ಹಾಗಾಗಿ ವಿದ್ಯಾರ್ಥಿನಿಯರು ಕಲಿಕೆಯಲ್ಲಿ ಹೊಸ ಆವಿಷ್ಕಾರ ಮಾಡಬೇಕು ಎಂದರು. ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಚನಗಳನ್ನು ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉತ್ತಮ ಜ್ಞಾನ, ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಜೀವನದಲ್ಲಿ ಉನ್ನತ ಸ್ಥಾನಕ್ಕೇರಬಹುದಾಗಿದೆ ಎಂದು ತಿಳಿಸಿದರು.
ಭಾರತದ ಮೊದಲ ವಿಜ್ಞಾನ ಅಕಾಡೆಮಿಯನ್ನು ಕರ್ನಾಟಕದಲ್ಲಿ ಆರಂಭಿಸಲಾಗಿದ್ದು, ಅದರ ಉದ್ಘಾಟನೆಯನ್ನು ಅಂದಿನ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ನೆರವೇರಿಸಿದ್ದನ್ನು ಮೆಲುಕು ಹಾಕಿದ ಹೊರಟ್ಟಿ  ಅವರು, ಶಿಕ್ಷಣ ಮತ್ತು ಸಂಶೋಧನೆಯ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಮಹತ್ತರವಾಗಿದೆ ಎಂದು ಹೇಳಿದರು. ಮಹಿಳೆಯರು ಸಣ್ಣ ಉದ್ಯಮಗಳಿಂದಲೂ ದೊಡ್ಡ ಮಟ್ಟದ ಯಶಸ್ಸು ಸಾಧಿಸಬಹುದು. ತಮ್ಮ ಬಾಲ್ಯದ ಸ್ನೇಹಿತೆಯೊಬ್ಬರು ಮಹಿಳೆಯರಿಗೆ ಟೈಲರಿಂಗ್ ತರಬೇತಿ ನೀಡಿ ಯಶಸ್ವಿ ಉದ್ಯಮಿಯಾಗಿರುವುದನ್ನು ಉದಾಹರಿಸಿದ ಅವರು, "ನಮ್ಮಿಂದ ಏನೂ ಸಾಧ್ಯವಿಲ್ಲ ಎಂಬ ಮನೋಭಾವವನ್ನು ಮಹಿಳೆಯರು ತೊರೆಯಬೇಕು ಎಂದು ಸಲಹೆ ನೀಡಿದರು. ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತರಲ್ಲ. ನ್ಯಾಯಾಂಗ, ಪೊಲೀಸ್, ವೈದ್ಯಕೀಯ, ಶಿಕ್ಷಣ, ಆಡಳಿತ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರಿದ್ದಾರೆ. ಅವರಿಗೆ ಎಲ್ಲೆಡೆ ಉತ್ತಮ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯತ್ತ ಹೆಜ್ಜೆ ಇಡಬೇಕು ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೇಶದಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳು ಲಭ್ಯವಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ಮಾಡಿದರು. ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಶೇ.೧೦೦ರಷ್ಟು ಮಹಿಳಾ ಪ್ರಾಧ್ಯಾಪಕರು ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದ ಅವರು, ರಾಜ್ಯದ ಅನೇಕ ಅನುದಾನರಹಿತ ಶಾಲೆಗಳಿಗೆ ಅನುದಾನ ದೊರಕಿಸುವಲ್ಲಿ ಬಸವರಾಜ ಎಸ್. ಹೊರಟ್ಟಿ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಶ್ಲಾಘಿಸಿದರು. ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಉನ್ನತ ಅಧಿಕಾರಿಗಳಾಗಬೇಕು ಎಂದು ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಎಸ್.ವಿ. ಹಲಸೆ ಮಾತನಾಡಿ, ಐತಿಹಾಸಿಕ ವಿಜಯಪುರದಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಉತ್ತರ ಕರ್ನಾಟಕದ ಮಹಿಳಾ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದ ಉತ್ತಮ ವೇದಿಕೆ ಹಾಗೂ ಹೆಬ್ಬಾಗಿಲಿನಂತಾಗಿದೆ ಎಂದರು.
ಉತ್ತರ ಕರ್ನಾಟಕದ ಮಹಿಳಾ ವಿದ್ಯಾರ್ಥಿನಿಯರು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಶಿಕ್ಷಣದೊಂದಿಗೆ ಕೌಶಲ್ಯಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಕೌಶಲ್ಯಾಧಾರಿತ ಶಿಕ್ಷಣವೇ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸಿನ ಮೂಲಮಂತ್ರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವವಿದ್ಯಾನಿಲಯದ ಸ್ಥಾಪನೆಯಿಂದ ಇಲ್ಲಿಯವರೆಗೆ ಸಾಧಿಸಿರುವ ಶೈಕ್ಷಣಿಕ ಪ್ರಗತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿನಿಯರ ಶೈಕ್ಷಣಿಕ ಸಬಲೀಕರಣಕ್ಕಾಗಿ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವರಾದ  ಪ್ರೊ. ಬಿ. ಎಲ್. ಲಕ್ಕಣ್ಣವರ,  ಕುಲಸಚಿವರಾದ ಶಂಕರಗೌಡ ಡಿ. ಸೋಮನಾಳ ಹಾಗೂ ಆರ್ಥಿಕ ಅಧಿಕಾರಿಗಳಾದ ರಾಮಣ್ಣಗೌಡ ಅಥಣಿ ಸೇರಿದಂತೆ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST