ಬಳ್ಳಾರಿ, ಜು.21: ರಾಜ್ಯದಲ್ಲಿ ಎಐಎಂಐಎಂ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೂತ್ ಮಟ್ಟದ ಸದಸ್ಯತ್ವ ಅಭಿಯಾನ ಹಾಗೂ ಸಂಘಟನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಲತೀಫ್‌ಖಾನ್ ಫಠಾನ್ ತಿಳಿಸಿದರು.
ನಗರದ ಅತಿಥಿ ಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
2012ರಿಂದ ಕರ್ನಾಟಕದಲ್ಲಿ ಎಐಎಂಐಎಂ ಪಕ್ಷ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದೀಗ ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಗ್ರಾಮ ಮಟ್ಟದವರೆಗೆ ಪಕ್ಷವನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಸಂಘಟನೆಯ ಬೆಳವಣಿಗೆ, ಸದಸ್ಯತ್ವ ವೃದ್ಧಿ ಹಾಗೂ ಸ್ಥಳೀಯ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸುವ ಕುರಿತು ಚರ್ಚಿಸಲಾಗಿದೆ. ಪ್ರತಿಯೊಂದು ಬೂತ್‌ನಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲೇ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಐಎಂಐಎಂ ಮುಖಂಡರಾದ ನಜೀರ್ ಹುನಯಲ್, ದಾದಾಪೀರ್ ಬೆಟ್ಟಗೇರಿ, ಮೊಹಮ್ಮದ್ ಶಾರುಖ್ ಪಾಟೀಲ್, ಶಫಾಕತ್ ಬಡಗೇರಿ, ಝಾಕೀರ್ ಹಾಗೂ ದಾದಾ ಸಲ್ಮಾನ್, ದಾದಾ ಪೀರ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.