ಬಳ್ಳಾರಿ, ನ.23:: ಕ್ಯಾನ್ಸರ್ ರೋಗಿಗಳಿಗೆ ಜೀವ ಉಳಿಸುವ ರೇಡಿಯೋಥೆರಪಿ ಚಿಕಿತ್ಸೆ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಸಭಾ ಸದಸ್ಯ ಡಾ. ಸೈಯ್ಯದ್ ನಾಸೀರ್ ಹುಸೇನ್, ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್ಸಿ) ಎದುರಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ, ಅರ್ಹ ರೋಗಿಗಳಿಗೆ ತಕ್ಷಣ ಚಿಕಿತ್ಸೆ ಒದಗಿಸುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಬಳ್ಳಾರಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಬಡ ಮತ್ತು ಮಧ್ಯಮ ವರ್ಗದ ಕ್ಯಾನ್ಸರ್ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲೇ ಅಗತ್ಯ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ (ಎಬಿ-ಎಆರ್ಕೆ) ಯೋಜನೆಯಡಿ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೋಡ್ಗಳಲ್ಲಿನ ತಾಂತ್ರಿಕ ದೋಷದಿಂದಾಗಿ ರೇಡಿಯೋಥೆರಪಿ ಚಿಕಿತ್ಸೆ ಪಡೆಯಲು ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಪರಿಣಾಮವಾಗಿ 15ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಗಾಗಿ ಕಾಯುವಂತಾಗಿದೆ ಎಂಬ ವರದಿಗಳು ಗಮನಕ್ಕೆ ಬಂದಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗೆ ತುತ್ತಾದವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುವುದು ಅತ್ಯಂತ ಮುಖ್ಯ. ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸಾ ವೆಚ್ಚ ಭರಿಸಲಾಗದೆ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿರುವ ಬಡ ರೋಗಿಗಳಿಗೆ ತಾಂತ್ರಿಕ ಕಾರಣಗಳಿಂದ ಚಿಕಿತ್ಸೆ ನಿರಾಕರಣೆಯಾಗುವುದು ಅಥವಾ ವಿಳಂಬವಾಗುವುದು ಸರಿಯಲ್ಲ. ಇದರಿಂದ ರೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ, ಎಬಿ-ಎಆರ್ಕೆ ಯೋಜನೆಯ ಚಿಕಿತ್ಸಾ ಕೋಡ್ಗಳಲ್ಲಿರುವ ದೋಷಗಳನ್ನು ಸರಿಪಡಿಸಬೇಕು. ಬಿಎಂಸಿಆರ್ಸಿಯಲ್ಲಿರುವ ರೇಡಿಯೋಥೆರಪಿ ಸೌಲಭ್ಯವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು, ಯೋಜನೆಯಡಿ ಅರ್ಹತೆ ಹೊಂದಿರುವ ಎಲ್ಲ ರೋಗಿಗಳಿಗೆ ಯಾವುದೇ ಅಡೆತಡೆಯಿಲ್ಲದೆ ಚಿಕಿತ್ಸೆ ದೊರೆಯುವಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಡಾ. ನಾಸೀರ್ ಹುಸೇನ್ ಆಗ್ರಹಿಸಿದ್ದಾರೆ.