ಮಹಾಲಿಂಗಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಮಹಾಲಿಂಗಪುರ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರೀತಮ್ ನಾಯಕ್ ಅವರ ನೇತೃತ್ವದಲ್ಲಿ ಬುಧವಾರ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಹಾಗೂ ಹೋಂ ಗಾರ್ಡ್ ಸಿಬ್ಬಂದಿಯಿಂದ ಪಥಸಂಚಲನ ನಡೆಯಿತು.
ನಗರದ ಪ್ರಮುಖ ರಸ್ತೆ, ವೃತ್ತಗಳು ಹಾಗೂ ಗಣೇಶ ಮೂರ್ತಿಗಳ ಪ್ರತಿ?ಪನಾ ಸ್ಥಳಗಳ ಸುತ್ತಮುತ್ತ ಪೊಲೀಸ್ ಸಿಬ್ಬಂದಿ ಪಥಸಂಚಲನ ನಡೆಸಿ ಸಾರ್ವಜನಿಕರಲ್ಲಿ ಸುರಕ್ಷತೆಯ ಭರವಸೆ ಮೂಡಿಸಿದರು. ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸುವಂತೆ ಸಾರ್ವಜನಿಕರಿಗೆ ಸಂದೇಶ ನೀಡಲಾಯಿತು.
ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ಗಣೇಶೋತ್ಸವದ ದಿನಗಳಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿ, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು.
ಪಥಸಂಚಲನದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಹೋಂ ಗಾರ್ಡ್ ಸಿಬ್ಬಂದಿ ಪಾಲ್ಗೊಂಡಿದ್ದರು.