ರಾಯಬಾಗ: ಹಲವು ವರ್ಷಗಳಿಂದ ಹದಗೆಟ್ಟು ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡಿದ್ದ ತಾಲೂಕಿನ ಬ್ಯಾಕುಡ ಗ್ರಾಮದ ಸುಮಾರು 4 ಕಿ.ಮೀ ಉದ್ದದ ರಸ್ತೆಗೆ ಇದೀಗ ಕಾಯಕಲ್ಪ ಸಿಗುವ ಕಾಲ ಬಂದಿದೆ. ಗ್ರಾಮಸ್ಥರ ಸಂಕಷ್ಟಕ್ಕೆ ಸ್ಪಂದಿಸಿರುವ ಜೆಡಿಎಸ್ ಮುಖಂಡ ಶಿವರಾಜ ಪಾಟೀಲ ಅವರು ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಗ್ರಾಮದ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಈ ಮಾರ್ಗದಲ್ಲಿ ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿದ್ದು, ಮಳೆ ಬಂದಾಗ ರಸ್ತೆಯಲ್ಲಿ ನೀರು ನಿಂತು ಸಂಚಾರ ದುಸ್ತರವಾಗಿತ್ತು. ದ್ವಿಚಕ್ರ ವಾಹನ ಸವಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಸಮಸ್ಯೆ ಎದುರಿಸುತ್ತಿದ್ದರು.
ರಸ್ತೆ ದುರಸ್ತಿಗಾಗಿ ಸಂಬಂಧಿಸಿದ ಇಲಾಖೆಗೆ ಮನವಿ ಮಾಡಿದರೂ ನಿರೀಕ್ಷಿತ ಮಟ್ಟದಲ್ಲಿ ಕಾಮಗಾರಿ ನಡೆಯದ ಹಿನ್ನೆಲೆಯಲ್ಲಿ ಶಿವರಾಜ್ ಪಾಟೀಲ ಅವರು ಸ್ವತಃ ಮುಂದಾಗಿ ರಸ್ತೆ ನಿರ್ಮಾಣದ ನಿರ್ಧಾರ ಕೈಗೊಂಡಿದ್ದಾರೆ. ಸ್ವಂತ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವ ಮೂಲಕ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಪ್ರಯತ್ನ ಮಾಡಿದ್ದಾರೆ.
ರಸ್ತೆ ನಿರ್ಮಾಣ ಪೂರ್ಣಗೊಂಡ ಬಳಿಕ ಬ್ಯಾಕುಡ ಗ್ರಾಮದಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ಮತ್ತಷ್ಟು ಸುಗಮವಾಗಲಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸುರಕ್ಷಿತವಾಗಿ ಸಂಚರಿಸಲು ಅನುಕೂಲವಾಗಲಿದೆ.
ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಬ್ಯಾರಿಸ್ಟರ ಪ್ರತಾಪರಾವ್ ಪಾಟೀಲ ಅವರ ಪುತ್ರರಾಗಿರುವ ಶಿವರಾಜ್ ಪಾಟೀಲ ಅವರ ಈ ಕಾರ್ಯಕ್ಕೆ ಬ್ಯಾಕುಡ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಬಹುದಿನಗಳ ರಸ್ತೆ ಸಮಸ್ಯೆಗೆ ಪರಿಹಾರ ದೊರೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.