ಮಂಗಳೂರಿಗೆ ಬರುವ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗದ ಕಾರಣ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ವಿಮಾನಗಳನ್ನು ಕಳುಹಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳಿದ್ದ ಎರಡು ವಿಮಾನಗಳನ್ನು ವಾಪಾಸ್ ಬೆಂಗಳೂರಿಗೆ ಹಿಂದುರುಗಿಸಲಾಗಿದೆ. ಮಂಗಳೂರಿನ ಬಜ್ಪೆ, ಕಿನ್ನಿಪದವು ಬಳಿ ಸಿಡಿಲು ಬಡಿದು ತೆಂಗಿನ ಮರ ಕ್ಕೆ ಬೆಂಕಿ ಹೊತ್ತಿಕೊಂಡಿದೆ.
ಉಳಿದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಭಾಗದಲ್ಲಿ ಮಳೆಯಾಗಿದೆ. ಬಿಸಿಲ ಬೇಗೆಯಿಂದ ತತ್ತರಿಸುತ್ತಿದ್ದ ಕರಾವಳಿಯ ಕೆಲವೆಡೆ ಮಳೆಯಾಗಿದೆ. ಭಾರಿ ತಾಪಮಾನದಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆದಿದ್ದಾನೆ. ಕಡಬದಲ್ಲಿ ಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಬುಧವಾರ ಸಂಜೆ ವರ್ಷಧಾರೆ ಸುರಿದಿದ್ದು, ತಂಪೆರೆದಿದೆ. ಮೂಡಿಗೆರೆ, ಕಳಸ, ಎನ್ಆರ್ ಪುರ ತಾಲೂಕಿನ ವಿವಿಧೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ವರ್ಷದ ಮೊದಲ ಮಳೆಯ ಸಿಂಚನಕ್ಕೆ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿತ್ತು.
ಹಾಸನ ಜಿಲ್ಲೆಯಲ್ಲಿ ವಿವಿಧೆಡೆ ಬಿರುಗಾಳಿ ಸಹಿತವಾಗಿ ಮಳೆ ಸುರಿದಿದೆ. ಮೊದಲ ಮಳೆಯ ಅಬ್ಬರ ಜೋರಾಗಿದ್ದು, ಭೂಮಿ ತಂಪಾಗಿದೆ. ಇತ್ತ ತುಮಕೂರಿನಲ್ಲೂ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಬಿಸಿಲಿನ ತಾಪಕ್ಕೆ ವರುಣರಾಯ ತಂಪೆರೆದಿದ್ದಾನೆ.