ಅಥಣಿ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿದ್ದ ದೃಷ್ಟಿಕೋನ ಬದಲಾಗುತ್ತಿದ್ದು, ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹೆಚ್ಚಿನ ಉತ್ಸಾಹ ಆಸಕ್ತಿ ತೋರುತ್ತಿದ್ದಾರೆ.
ಇದರ ಪರಿಣಾಮವಾಗಿ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿರುವುದು ಶಿಕ್ಷಣ ಕ್ಷೇತ್ರದಲ್ಲಿ ಆಶಾದಾಯಕ ಬೆಳವಣಿಗೆಯಾಗಿದೆ.
ಅಥಣಿ ತಾಲೂಕಿನ ದರೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಭ್ಯವಿರುವ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು, ಅನುಭವಿ ಹಾಗೂ ಅರ್ಹ ಶಿಕ್ಷಕರ ಬೋಧನೆ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಸರ್ಕಾರದ ವಿವಿಧ ಶೈಕ್ಷಣಿಕ ಸೌಲಭ್ಯಗಳು ಪೋಷಕರನ್ನು ಆಕರ್ಷಿಸುತ್ತಿವೆ.
ಇದರ ಜೊತೆಗೆ ಶಾಲೆಗಳಲ್ಲಿ ಸುಧಾರಿತ ಕಲಿಕಾ ವಾತಾವರಣ, ಉತ್ತಮ ಬೋಧನಾ ಪದ್ಧತಿ, ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳು ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನೀಡುತ್ತಿರುವ ಪ್ರೋತ್ಸಾಹದಿಂದ ಸರ್ಕಾರಿ ಶಾಲೆಗಳ ಮೇಲಿನ ವಿಶ್ವಾಸ ಹೆಚ್ಚುತ್ತಿದೆ ಹಾಗೂ ಸರ್ಕಾರದ ವಿವಿಧ ಶೈಕ್ಷಣಿಕ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವೇ ಈ ಧನಾತ್ಮಕ ಬದಲಾವಣೆಗೆ ಪ್ರಮುಖ ಕಾರಣವಾಗಿದೆ.
ಸರ್ಕಾರಿ ಶಾಲೆಗಳತ್ತ ಪೋಷಕರು ತೋರುತ್ತಿರುವ ಈ ಒಲವು ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಪ್ರತಿಬಿಂಬಿಸುತ್ತಿದ್ದು, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಹೊಸ ಭರವಸೆ ಮೂಡಿಸಿದೆ.
ಅಥಣಿ ತಾಲೂಕಿನ ದರೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಈ ಸಾಧನೆಯನ್ನು ಮೆಚ್ಚಿ ಹಿರಿಯ ಗುರುವೃಂದದವರಾದ ನಿವೃತ್ತ ಪ್ರಧಾನ ಗುರುಮಾತೆ ಬಿ. ಆರ್ ಕಾತರಕಿ, ಪ್ರಧಾನ ಗುರುಗಳಾದ ಎ. ಎಸ್ ಸುಂಡಿ, ಶಿಕ್ಷಕ ಪಿ. ಎಸ್ ಶಿಂಗೆ ಹಾಗೂ ದೈಹಿಕ ಶಿಕ್ಷಕ ಎ. ಎಂ ಹನಗಂಡಿ ಅವರು ಶಾಲೆಯ ಸಮಗ್ರ ಸಿಬ್ಬಂದಿಗೆ ಅಭಿನಂದಿಸಿ ಶುಭ ಹಾರೈಸಿದ್ದಾರೆ.