ತಾಳಿಕೋಟೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಲು ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಸಹಕಾರಿಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ ಹೇಳಿದರು.
ಪಟ್ಟಣದ ಶ್ರೀ ಎಸ್.ಎಸ್. ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಹಾಗೂ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಸ್.ಎಸ್. ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೂ ತಂತ್ರಜ್ಞಾನ ಆಧಾರಿತ ಶಿಕ್ಷಣ ದೊರೆಯಬೇಕು ಎಂಬ ಮಹದಾಸೆಯಿಂದ ಶಾಲೆಯ ಎಲ್ಲ ವಿಭಾಗಗಳಿಗೂ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನದ ನೆರವಿನಿಂದ ವಿಷಯಗಳನ್ನು ಸುಲಭವಾಗಿ ಅರ್ಥೈಸಿಕೊಂಡು ಕಲಿಕೆಯಲ್ಲಿ ಪ್ರಗತಿ ಸಾಧಿಸಲು ಇಂತಹ ಸೌಲಭ್ಯಗಳು ಸಹಕಾರಿಯಾಗಲಿವೆ ಎಂದರು.
ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಡಾ. ಎಂ.ಎಂ. ಬೆಳಗಲ್ಲ ಹಾಗೂ ತಾಲೂಕು ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಎಂ.ಕೆ. ಬಾಗವಾನ ಅವರು ಉಪಸ್ಥಿತರಿದ್ದರು.
ಇದೇ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಬಡದಾನಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಎಂ.ಎಂ. ಬೆಳಗಲ್ಲ ಹಾಗೂ ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಎಂ.ಕೆ. ಬಾಗವಾನ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್. ಪಾಟೀಲ ಹಾಗೂ ಕಾರ್ಯದರ್ಶಿ ಸಚಿನ್ ಎಚ್. ಪಾಟೀಲ, ಆಡಳಿತಾಧಿಕಾರಿ ಕಿರಣ ಪಾಟೀಲ, ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು ಉಪಸ್ಥಿತರಿದ್ದರು.