ನೇಸರಗಿ,ಜೂ,೦೬ : ಕೆ.ಎಲ್.ಇ. ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ?ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ವಿದ್ಯಾಧಿಕಾರಿಗಳಾದ ಡಾ. ವಿ. ಎಸ್. ಪಾಟೀಲರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೃಷಿ ವಿಶ್ವವಿದ್ಯಾಲಯ, ಧಾರವಾಡದ ವಿಶ್ರಾಂತ ಕುಲಪತಿಗಳಾದ ಡಾ.ಪಿ.ಎಲ್ ಪಾಟೀಲರು ಆಗಮಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಡಾ. ಪಿ. ಎಲ್ ಪಾಟೀಲರು ಸಸಿಯನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಿದರು. ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬರೂ ಪ್ರಕೃತಿಯಿಂದ ಕಲಿಯಬೇಕು ಹಾಗೂ ಪರಿಸರವನ್ನು ಸ್ವಚ್ಛವಾಗಿ ಮತ್ತು ಸುರಕ್ಷಿತವಾಗಿ ಕಾಪಾಡಬೇಕೆಂದು ಕರೆ ನೀಡಿದರು. “ಕೃಷಿಯ ಮೂಲಾಧಾರಗಳಾದ ಮಣ್ಣು ಮತ್ತು ನೀರನ್ನು ಸಂರಕ್ಷಿಸುವುದು ಇಂದಿನ ಅಗತ್ಯವಾಗಿದೆ” ಎಂದು ತಿಳಿಸಿದರು.
ಹವಾಮಾನ ಬದಲಾವಣೆಯಿಂದಾಗಿ ಉಷ್ಣ ಗಾಳಿ, ಪ್ರವಾಹಗಳು ಹಾಗೂ ಅಕಾಲಿಕ ಮಳೆಯಂತಹ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಇವು ಮಾನವನ ಜೀವನ ಹಾಗೂ ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ವಿವರಿಸಿದರು. ನಮ್ಮ ಅಸ್ತಿತ್ವಕ್ಕಾಗಿ ನೈಸರ್ಗಿಕ ಸಂಪನ್ಮೂಲಗಳನ್ನು ಕಾಪಾಡುವುದು ಅತ್ಯಗತ್ಯವಾಗಿದೆ ಎಂದು ಒತ್ತಿ ಹೇಳಿದರು.
ಪ್ರತಿಯೊಬ್ಬರೂ ಒಂದು ಗಿಡವನ್ನು ನೆಟ್ಟು ಬೆಳೆಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಜನ್ಮದಿನ, ಮದುವೆ ಹಾಗೂ ಇತರೆ ಶುಭ ಸಮಾರಂಭಗಳಲ್ಲಿ ಉಡುಗೊರೆಯಾಗಿ ಸಸಿಗಳನ್ನು ನೀಡುವ ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ, ಪರಿಸರ ಸಂರಕ್ಷಣೆಯ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಅಧ್ಯಕ್ಷೀಯ ಭಾಷಣದಲ್ಲಿ ಡಾ. ವಿ.ಎಸ್. ಪಾಟೀಲರು, ಮಾನವನ ವಿವಿಧ ಚಟುವಟಿಕೆಗಳಿಂದ ಉಂಟಾಗುತ್ತಿರುವ ಮಾಲಿನ್ಯವು ಪರಿಸರವನ್ನು ನಾಶಗೊಳಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. “ಮರಗಳು ಜಗತ್ತಿನ ಶ್ವಾಸಕೋಶಗಳಿದ್ದಂತೆ” ಎಂದು ಹೇಳಿದ ಅವರು, ಪ್ರತಿಯೊಬ್ಬರೂ ಮರಗಳನ್ನು ನೆಟ್ಟು, ಅವುಗಳನ್ನು ಪ್ರೀತಿಯಿಂದ ಪೋಷಿಸಿ ಸಂರಕ್ಷಿಸಬೇಕು ಎಂದು ಕರೆ ನೀಡಿದರು. ಪ್ಲಾಸ್ಟಿಕ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ, ಪರಿಸರ ಸ್ನೇಹಿ ಪರ್ಯಾಯಗಳನ್ನು ಬಳಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮವನ್ನು ಡಾ.ಪ್ರವೀಣ್ ಕುಮಾರ್. ಎಂ.ಬಿ ಯವರು ನಿರೂಪಿಸಿದರು, ಡಾ.ಮಧುರಿಮಾ ವಿನೋದ ರವರು ಅತಿಥಿಗಳನ್ನು ಹಾಗೂ ಸಭಿಕರನ್ನು ಸ್ವಾಗತಿಸಿದರು. ಡಾ.ಸೌರಭ ಮುನ್ನೋಳಿಯವರು ವಂದನಾರ್ಪಣೆಯನ್ನು ಸಲ್ಲಿಸಿದರು.
